ಸರ್ಕಾರಿ ಕೆಲಸಕ್ಕೆ ಆಯ್ಕೆಯಾದ 268 ಅಧಿಕಾರಿಗಳು
ಬೆಂಗಳೂರು : ರಾಜ್ಯದಲ್ಲಿ ಆರ್ಥಿಕ ಸಮಸ್ಯೆಯಿದೆ ಆದರೆ ವಿದ್ಯಾರ್ಥಿ ವೇತನ ವಿತರಣೆಯನ್ನು ಸ್ಥಗಿತಗೊಳಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿ ಪಡೆದ ಅಭ್ಯರ್ಥಿಗಳಲ್ಲಿ ಇಬ್ಬರು ಐಎಎಸ್, ಇಬ್ಬರು ಐಪಿಎಸ್ 13 ಅಭ್ಯರ್ಥಿಗಳು ಐಆರ್ಎಸ್ ಸೇವೆಗೆ ಆಯ್ಕೆಯಾಗಿರುವುದು ಸೇರಿದಂತೆ ಒಟ್ಟು 268 ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಿದ್ದಾರೆ. ವಿವಿಧ ಸೇವೆಗಳಿಗೆ ಸೇರ್ಪಡೆಯಾಗಿರುವ ಕುರಿತು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಇಲಾಖೆಯ ಕಾರ್ಯಕ್ರಮಗಳನ್ನು ಆದ್ಯತೆಗೆ ಅನುಸಾರ ಗುರುತಿಸಿ, ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.
ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಭೆಗೆ ಮಾಹಿತಿ ನೀಡಿದ ಅಧಿಕಾರಿಗಳು ಇಲಾಖೆಯ ಕಾರ್ಯಕ್ರಮ ಅನುಷ್ಠಾನದಲ್ಲಿ2019-20ನೇ ಸಾಲಿನಲ್ಲಿ ಶೇ 97 ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ ಶ್ರೀರಾಮುಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಅಪರ ಮುಖ್ಯ ಕಾರ್ಯದರ್ಶಿ ಗಂಗಾರಾಮ್ ಬಡೇರಿಯ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು








