ಬೆಳಗಾವಿ: ಇತ್ತೀಚೆಗೆ ಕೊರೊನಾದಿಂದ ಮೃತಪಟ್ಟ ಕೇಂದ್ರ ರೈಲ್ವೆ ರಾಜ್ಯ ಸಚಿವ ದಿ.ಸುರೇಶ್ ಅಂಗಡಿ ಅವರ ಮನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.
ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಆಗಮಿಸಿದ ಬಿಎಸ್‍ವೈ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.
ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ ಸಜ್ಜನಿಕೆಯ ನಡವಳಿಕೆಯನ್ನು ಸ್ಮರಿಸಿದರು.
ದಿ.ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ ಅವರ ಕೈಹಿಡಿದು ಕೆಲಹೊತ್ತು ಭಾವುಕರಾದ ಮುಖ್ಯಮಂತ್ರಿಗಳು, ದೇವರು ಈ ರೀತಿ ಅನ್ಯಾಯ ಮಾಡಬಾರದಿತ್ತು ಎಂದು ದುಃಖ ವ್ಯಕ್ತಪಡಿಸಿದರು. , ಸುರೇಶ್ ಅಂಗಡಿ ಅವರು ಆಸ್ಪತ್ರೆಯಲ್ಲಿ ಇದ್ದಾಗ ಆರೋಗ್ಯವಾಗಿ ಇದ್ದೀನಿ ಎಂದು ತಿಳಿಸಿದ್ದನ್ನು ನೆನಪಿಸಿಕೊಂಡರು.
ದೆಹಲಿಯಲ್ಲಿ ಸ್ಮಾರಕ ನಿರ್ಮಾಣಕ್ಕೆ ಸೂಚನೆ: ಬಿಎಸ್‍ವೈ
ದೆಹಲಿಯ ರುದ್ರಭೂಮಿಯ ಅಭಿವೃದ್ಧಿಯ ಜತೆಗೆ ಅಲ್ಲಿ ದಿ.ಸುರೇಶ್ ಅಂಗಡಿ ಅವರ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸುರೇಶ್ ಅಂಗಡಿ ಅವರ ಸಂಬಂಧಿಕರೂ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್, ಬಾಕಿ ಉಳಿದಿದ್ದ ರೈಲ್ವೆ ಇಲಾಖೆಯ ಬಹುತೇಕ ಯೋಜನೆಗಳಿಗೆ ಅಂಗಡಿ ಅವರು ಚಾಲನೆ ನೀಡಿದ್ದರು ಎಂದು ನೆನಪಿಸಿಕೊಂಡರು.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ತೀವ್ರ ಆಸಕ್ತಿಯಿಂದ ಕೆಲಸ ಮಾಡುತ್ತಿದ್ದರು ಎಂದು ಹೇಳಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಬಳಿಕ ಅಂಗಡಿ ಅವರು ಅತ್ಯಂತ ಚಟುವಟಿಕೆಯಿಂದ ಕೆಲಸ ಮಾಡುತ್ತಿದ್ದರು ಎಂದು ಸ್ಮರಿಸಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕೂಡ ಸುರೇಶ್ ಅಂಗಡಿ ಅವರೊಂದಿಗಿನ ಒಡನಾಟ ಸ್ಮರಿಸಿ ಕಣ್ಣೀರಿಟ್ಟ ಘಟನೆಯೂ ನಡೆಯಿತು.
ಪತ್ನಿ ಮಂಗಳಾ ಸುರೇಶ್ ಅಂಗಡಿ, ಮಕ್ಕಳಾದ ಶ್ರದ್ಧಾ ಹಾಗೂ ಸ್ಫೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಅಧಿಕಾರಿಗಳ ಜತೆ ಬಿಎಸ್‍ವೈ ಸಭೆ
ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ನಂತರ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪ್ರವಾಹ ಮತ್ತು ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪರಿಶೀಲಿಸಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉಪಸ್ಥಿತರಿದ್ದರು.










