ಬೆಂಗಳೂರು: ಪಾದರಾಯನಪುರದಲ್ಲಿ ಸರ್ಕಾರಿ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭಾನುವಾರ ಪಾದರಾಯನಪುರದ ಘಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ಸೌಮೇಂದು ಮುಖರ್ಜಿ ನೇತೃತ್ವದ ಸಿಸಿಬಿ ಪೊಲೀಸರ ತಂಡ, ತನಿಖೆಯನ್ನು ನಡೆಸಿ ವರದಿ ನೀಡಲಿದೆ ಎಂದರು.
ಇನ್ನು ಪಾದರಾಯನಪುರದ ಘಟನೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ಅವರ ಪಾತ್ರ ಏನು ಎಂಬುದು ಕುರಿತು ತನಿಖೆ ನಡೆಸಲಾಗುವುದು. ಅಗತ್ಯವಿದ್ದಲ್ಲಿ, ಜಮೀರ್ ಅವರನ್ನು ಕೂಡ ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.