ಇಂದು ಬೆಂಗಳೂರು ತಂತ್ರಜ್ಞಾನ ಶೃಂಗ ಸಮಾವೇಶಕ್ಕೆ ಚಾಲನೆ
ಅಂತಾರಾಷ್ಟ್ರೀಯ ಮಟ್ಟದ ಬೆಂಗಳೂರು ತಂತ್ರಜ್ಞಾನ ಶೃಂಗದ (ಬಿಟಿಎಸ್-22) ರಜತೋತ್ಸವ ಸಮಾವೇಶ ಬುಧವಾರ (16-11-2022) ಆರಂಭವಾಗಲಿದೆ.
ಇಂದಿನಿಂದ 3 ದಿನಗಳ ಕಾಲ ಅರಮನೆ ಮೈದಾನದಲ್ಲಿ ಶೃಂಗ ಸಮಾವೇಶ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 10 ಗಂಟೆಗೆ ವರ್ಚುವಲ್ ಮಾಧ್ಯಮದ ಮೂಲಕ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.
ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಂಗಳವಾರ ಬೆಂಗಳೂರು ಶೃಂಗ ಸಮಾವೇಶದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅವರು, ನ.16ರಿಂದ 18ರವರೆಗೆ ಮೂರು ದಿನಗಳ ಕಾಲ ತಂತ್ರಜ್ಞಾನ ಶೃಂಗ ರಜತೋತ್ಸವ ಸಮಾವೇಶ ನಡೆಯಲಿದೆ. ಈ ಸಮಾವೇಶವು ಕನಿಷ್ಠ 9 ಒಡಂಬಡಿಕೆಗಳಿಗೆ (ಎಂಒಯು) ಹಾಗೂ 20ಕ್ಕೂ ಹೆಚ್ಚು ಉತ್ಪನ್ನಗಳ ಬಿಡುಗಡೆಗೆ ಸಾಕ್ಷಿಯಾಗಲಿದ್ದು, ರಜತೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮರಣಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.

ಶೃಂಗ ಸಮಾವೇಶದಲ್ಲಿ ದೇಶದ 16 ರಾಜ್ಯಗಳ ವಿವಿಧ ಸ್ಟಾರ್ಟ್ ಅಪ್‌ಗಳು ಪಾಲ್ಗೊಳ್ಳಲಿದ್ದು, ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಯುಕ್ತ ಅರಬ್ ಸಂಸ್ಥಾನದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಖಾತೆಯ ಸಹಾಯಕ ಸಚಿವ ಒಮರ್ ಬಿನ್ ಸುಲ್ತಾನ್ ಅಲ್ ಒಲಾಮಾ, ಆಸ್ಪ್ರೇಲಿಯಾದ ವಿದೇಶಾಂಗ ಖಾತೆ ಸಹಾಯಕ ಸಚಿವ ಟಿಮ್ ವ್ಯಾಟ್ಸ್, ಫಿನ್ಲೆಂಡ್‌ನ ವಿಜ್ಞಾನ ಸಚಿವ ಪೆಟ್ರಿ ಹಾನ್ಕೊನೆನ್, ಭಾರತದ ಮೊದಲ ಯೂನಿಕಾರ್ನ್ ಕಂಪನಿ ‘ಇಮ್ಮೊಬಿ’ಯ ಸಂಸ್ಥಾಪಕ ನವೀನ್ ತಿವಾರಿ, ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೋನ್ (ವರ್ಚುಯಲ್) ಮತ್ತು ಅಮೆರಿಕದ ಕಿಂಡ್ರಿಲ್ ಕಂಪನಿಯ ಸಿಇಒ ಮಾರ್ಟಿನ್ ಶ್ರೋಟರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು

575ಕ್ಕೂ ಹೆಚ್ಚು ಪ್ರದರ್ಶಕರು, 350ಕ್ಕೂ ಅಧಿಕ ಅಂತಾರಾಷ್ಟ್ರೀಯ ಪರಿಣತ ತಂತ್ರಜ್ಞರು, 5 ಸಾವಿರಕ್ಕಿಂತ ಹೆಚ್ಚು ಉದ್ಯಮಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಮಾವೇಶದ ಎಲ್ಲಾ ಗೋಷ್ಠಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ನೇರವಾಗಿ ಬಿತ್ತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು
ಸಾರ್ವಜನಿಕರಿಗೆ ಪ್ರತಿದಿನ ಮಧ್ಯಾಹ್ನ 2ರಿಂದ ಸಂಜೆ 6 ಗಂಟೆವರೆಗೆ ಬೆಂಗಳೂರು ಶೃಂಗ ಸಮಾವೇಶಕ್ಕೆ ಮುಕ್ತ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ತಿಳಿಸಿದರು.








