ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್ ಪಕ್ಷವೂ ಸಹ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಸೋಂಕಿತರಿಗೆ ಸಹಾಯವಾಗುವ ಉದ್ದೇಶದಿಂದ ಕಾಂಗ್ರೆಸ್ ಶಾಸಕರು ಕಡ್ಡಾಯವಾಗಿ 1 ಲಕ್ಷ ರೂಪಾಯಿ ದೇಣಿಗೆ ನೀಡಬೇಕೆಂದು ಸೂಚಿಸಿತ್ತು. ಅದರಂತೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶಾಸಕ ಅಜೇಯ್ ಸಿಂಗ್ ಅವರು ಕಾಂಗ್ರೆಸ್ ಕೊರೊನಾ ನಿಧಿ ದೇಣಿಗೆಯಾಗಿ ತಲಾ ಒಂದು ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಪ್ರಿಯಾಂಕ್ ಖರ್ಗೆ, ಶಾಸಕ ಅಜೇಯ್ ಸಿಂಗ್ ಕೆಪಿಸಿಸಿ ಅಧ್ಯಕ್ಷರಿಗೆ ಒಂದು ಲಕ್ಷ ರೂ ಚೆಕ್ ನೀಡಿದರು.








