ಹಾಸನ :ಪೊಲೀಸ್ ಇಲಾಖೆಯ ಸೂಚನೆ ಮೀರಿ ಉಕ್ಕಿ ಹರಿಯುತ್ತಿರುವ ನೀರಿನ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುವ ಪುಂಡರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ನಾಮ ಫಲಕ ಹಾಕುವಂತೆ ಸಚಿವ ಆರ್.ಅಶೋಕ್ ಸೂಚನೆ ನೀಡಿದ್ದಾರೆ.
ಸಚಿವರು ಇಂದು ಸಕಲೇಶಪುರ ತಾಲೂಕಿನಲ್ಲಿ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು, ಪ್ರತಿ ವರ್ಷ ಭಾರಿ ಮಳೆಯಾಗುತ್ತಿದ್ದು, ಜನರು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಕೆಲವೆಡೆ ಯುವಕರು ಉಕ್ಕಿ ಹರಿಯುವ ನದಿಗಳಲ್ಲಿ ಈಜಲು ಅಥವಾ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪುಂಡಾಟ ಮೆರೆಯುತ್ತಾರೆ. ಅಂತಹದ್ದನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಈ ಸಂಬಂಧ ಹಾಸನ ಎಸ್ಪಿ ಶ್ರೀನಿವಾಸ್ ಗೌಡ ಅವರಿಗೆ ಸೂಚನೆ ನೀಡಿದ್ದೇನೆ. ಅಪಾಯದ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.








