ಕೊಪ್ಪಳ: ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು, ತಮ್ಮ ಕ್ಷೇತ್ರದ ಪ್ರತಿಯೊಂದು ಗ್ರಾಪಂಗೂ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಒಂದು ಕೋಟಿ ರೂ. ಒದಗಿಸುವ ಕೆಲಸ ಮಾಡುತ್ತೇನೆ ಎದು ಭರವಸೆ ನೀಡಿದ್ದಾರೆ.
ಗಂಗಾವತಿ ಪಟ್ಟಣದ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ಗ್ರಾಪಂಗೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸನ್ಮಾನಿಸಿ ಮಾತನಾಡಿದ ಅವರು, ಸದ್ಯ ಬಂದಿರುವ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಸೇರಿದಂತೆ ಸದಸ್ಯರು ತಮ್ಮ ಹೆಸರು ಉಳಿಯುವಂತೆ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಜೀವ ಕೊಟ್ಟು, ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಸದಾ ಮುಂದೆ ಇರುತ್ತೇನೆ. ಸರ್ಕಾರದ ಅನುದಾನ ಸೇರಿದಂತೆ ಕೈಗಾರಿಕೆಗಳನ್ನು ಕರೆತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.