ಲಕ್ನೋ: ಉತ್ತರ ಪ್ರದೇಶದ ಆಸ್ಪತ್ರೆ (Jhansi Hospital Fire)ಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ ಸುಮಾರು 10 ಮಕ್ಕಳು ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ.
ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್ಐಸಿಯು) ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅದು ವ್ಯಾಪಕವಾಗಿ ಹಬ್ಬಿ ಮಕ್ಕಳು ಸಾವನ್ನಪ್ಪುವಂತಾಯಿತು. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ತಲುಪುವ ಮೊದಲೇ ಹೊಗೆ ತುಂಬಿದ ವಾರ್ಡ್ ನ ಕಿಟಕಿಗಳನ್ನು ಒಡೆದು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ರೋಗಿಗಳನ್ನು ಸ್ಥಳಾಂತರಿಸಲು ಯಶಸ್ವಿಯಾಗಿದ್ದಾರೆ.
ರಾತ್ರಿ 10:35 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ. ಮೂವತ್ತೇಳು ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮಕ್ಕಳ ವಾರ್ಡ್ ನ ಎರಡು ಘಟಕಗಳ ಪೈಕಿ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಈ ಘಟನೆ ನಡೆದ ಸಂದರ್ಭದಲ್ಲಿ ಐಸಿಯುನಲ್ಲಿ ಒಟ್ಟು 54 ಮಕ್ಕಳು ಇದ್ದರು ಎನ್ನಲಾಗಿದೆ. ಈ ಪೈಕಿ 44 ಮಕ್ಕಳು ಸುರಕ್ಷಿತರಾಗಿದ್ದಾರೆ. ಬಲಿಯಾದವರ ಪೈಕಿ ಏಳು ಮಕ್ಕಳನ್ನು ಗುರುತಿಸಲಾಗಿದೆ ಎಂದು ಉತ್ತರ ಪ್ರದೇಶದ ಡಿಸಿಎಂ ಬ್ರಜೇಶ್ ಪಾಠಕ್ ಹೇಳಿದ್ದಾರೆ.








