ರಾಜ್ಯದ ಪ್ರಥಮ ಕ್ರೀಡಾ ವಿಶ್ವ ವಿದ್ಯಾಲಯಕ್ಕೆ ಯಲಹಂಕದಲ್ಲಿ 100 ಎಕೆರೆ ಜಾಗ – ಕ್ರೀಡಾ ಸಚಿವ ಡಾ.ನಾರಾಯಣಗೌಡ
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಕನಸಿನಂತೆ ಕ್ರೀಡೆಯನ್ನು ಉನ್ನತ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮವಹಿಸಿದೆ ಎಂದು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಇಂದು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ಡಾ.ನಾರಾಯಣಗೌಡ ಅವರು, ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಯಶಸ್ವಿಗೊಳಿಸಲು ನಮ್ಮ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದು, ದೇಶದ ಹಲವು ವಿವಿಗಳಿಂದ 8000 ಕ್ರೀಡಾಪಟುಗಳು, ಸಿಬ್ಬಂದಿ ಬಂದಿದ್ದಾರೆ. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ರಾಜ್ಯದ ಪ್ರಥಮ ಕ್ರೀಡಾ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಯಲಹಂಕದಲ್ಲಿ 100 ಎಕರೆ ಜಮೀನು ಗುರುತಿಸಲಾಗಿದೆ. 65 ಎಕರೆ ಈಗಾಗಲೇ ಸರಕಾರದ ವಶಕ್ಕೆ ಪಡೆಯಲಾಗಿದೆ. ಇನ್ನೂ 35 ಎಕರೆ ಪಡೆಯಲು ಜಿಲ್ಲಾಧಿಕಾರಿಗೆ ತಿಳಿಸಲಾಗಿದೆ ಎಂದು ರಾಜ್ಯದ ರೇಷ್ಮೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಕೆ.ಸಿ. ನಾರಾಯಣಗೌಡ ಅವರು ತಿಳಿಸಿದರು.
ನಾಲ್ಕೈದು ವರ್ಷಗಳಿಂದ ಸ್ಥಗಿತಗೊಂಡಿದ್ದ ಜಕ್ಕೂರು ಸರ್ಕಾರಿ ವೈಮಾನಿಕ ಶಾಲೆ ಪುನಾರಂಭ ಮಾಡಲಾಗಿದೆ. ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ 75 ಕ್ರೀಡಾಪಟುಗಳಿಗೆ ತರಬೇತಿ ನೀಡಲಾಗುತ್ತಿದೆ. ಸಿದ್ದಿ ಜನಾಂಗದ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.