ನವದೆಹಲಿ: ಕೊರೊನಾ ಸೋಂಕು ನಿಗ್ರಹಕ್ಕೆ ಹಲವು ಕ್ರಮಗಳನ್ನು ತೆಗೆದುಕೊಂಡ ಹೊರತಾಗಿಯೂ ಶುಕ್ರವಾರ ಒಂದೇ ದಿನ 149ಕ್ಕೂ ಹೆಚ್ಚು ಹೊಸ ಪ್ರಕರಣಗಳು ದೃಢಪಟ್ಟಿವೆ. ಈ ವರೆಗೂ ಕೊರೊನಾಸುರನಿಗೆ 19 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಬಳಿಕ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದು ಇದೇ ಮೊದಲು. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 850ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಶುಕ್ರವಾರ ಕೇರಳ, ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಪ್ರಮಾಣದಲ್ಲಿ ಹೊಸ ಸೋಂಕು ಪತ್ತೆಯಾಗಿದೆ. ಈ ನಡುವೆ ದೇಶದಲ್ಲಿ ಇನ್ನೂ ಸಾಮುದಾಯಿಕ ಸೋಂಕು ಹರಡುವಿಕೆಯ ಯಾವುದೇ ಪ್ರಕರಣ ಬೆಳಕಿಗೆ ಬಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.








