ಬೆಂಗಳೂರು: ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಕೇಂದ್ರ ಸರ್ಕಾರ ಪರಿಹಾರ ಘೋಷಿಸಲಿಲ್ಲ. ಇತ್ತ ರಾಜ್ಯ ಸರ್ಕಾರ ಕೂಡ ರೈತರ ಪರವಾಗಿ ನಿಲ್ಲುತ್ತಿಲ್ಲ. ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2 ಸಾವಿರ ರೂ. ನೀಡಲು ನಿರ್ಧರಿಸಿದೆ.
ರಾಜ್ಯದಲ್ಲಿ ಈ ಬಾರಿ ಹಿಂಗಾರು ಹಾಗೂ ಮುಂಗಾರು ಸಮರ್ಪಕವಾಗಿಲ್ಲ. ಹೀಗಾಗಿ ರೈತರು ನಷ್ಟ ಅನುಭವಿಸಿದ್ದಾರೆ. ಈ ನಿಟ್ಟಿನಲ್ಲಿ ರೈತರಿಗೆ 2 ಸಾವಿರ ರೂ. ನೀಡಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ (NDRF) 105 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಈ ಹಣ ರೈತರ ಖಾತೆಗಳಿಗೆ ಜಮಾ ಆಗಲಿದೆ ಎಂದು ಕಂದಾಯ ಇಲಾಖೆ ಅಧಿಕಾರಿ ತಿಳಿಸಿದ್ದಾರೆ. ಈ ಬಾರಿ ರಾಜ್ಯದ ರೈತರು 30 ಸಾವಿರ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ. ಬರದಿಂದಾಗಿ 42 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಬರ ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೃಷ್ಣ ಭೈರೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. 18,177 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಆದರೆ, ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ.








