ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಹಾಗಾಗಿ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಸೀಲ್ ಡೌನ್, ಲಾಕ್ ಡೌನ್ ಅಸ್ತ್ರ ಪ್ರಯೋಗ ಮಾಡಿದೆ. ಅದಕ್ಕಾಗಿ ಬೆಂಗಳೂರಿನ 5 ವಾರ್ಡ್ ಗಳನ್ನು ಲಾಕ್ ಡೌನ್, 7 ಏರಿಯಾಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಸೀಲ್ ಡೌನ್ ಮಾಡಿದರೇ ಪ್ರಯೋಜವಿಲ್ಲ ಬೆಂಗಳೂರನ್ನು 20 ದಿನ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಇದೆ ವೇಳೆ ಸರ್ಕಾರಕ್ಕೆ ನೆರವಾಗಿ ಚಾಟಿ ಬಿಸಿದ್ದಾರೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ.
ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ.
ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ಸರ್ಕಾರದ ನಡೆಗೆ ವ್ಯಂಗ್ಯ ಮಾಡಿದ್ದಾರೆ.