ದ್ವಿತೀಯ ಪಿಯು ಪರೀಕ್ಷೆ ನಡೆಸುವುದು ಅನಿವಾರ್ಯ : ಸುರೇಶ್ ಕುಮಾರ್
ಬೆಂಗಳೂರು : ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಅನಿವಾರ್ಯ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರವಾಗಿ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆ ನಡೆಸಿತು. ಈ ವೇಳೆ ಮಾತನಾಡಿದ ಸುರೇಶ್ ಕುಮಾರ್, ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ.
ಕೋವಿಡ್ ಸಂಪೂರ್ಣವಾಗಿ ತಹಬಂದಿಗೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕವಾಗುತ್ತದೆ.
ಪ್ರಸ್ತುತ ಕೋವಿಡ್ ಪ್ರಸರಣವು ಎಲ್ಲೆಡೆ ತೀವ್ರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಎರಡನೇ ಅಲೆ ತಹಬಂದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ.
ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ಕರ್ನಾಟಕ ಸರ್ಕಾರವು ಯೋಜಿಸಿದೆ ಎಂದು ತಿಳಿಸಿದರು.
ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ.
ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಜುಲೈ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್ ತಿಂಗಳಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ.
ಹಾಗಾಗಿ ನೀಟ್/ಜೆಇಇ/ಸಿಇಟಿ/ಐಸಿಎಆರ್/ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ತಿಂಗಳ ಸೂಕ್ತ ದಿನಾಂಕಗಳಂದು ಆಯೋಜಿಸಬಹುದಾಗಿದೆ ಸುರೇಶ್ ಕುಮಾರ್ ಸಲಹೆ ನೀಡಿದರು.