ವಿದೇಶಿ ಪ್ರಯಾಣ ಮಾಡದ ದೆಹಲಿ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕು ಪತ್ತೆ…
ಯಾವುದೇ ವಿದೇಶಿ ಪ್ರಯಾಣ ಮಾಡದ 34 ವರ್ಷದ ರಾಷ್ಟ್ರ ರಾಜಧಾನಿ ದೆಹಲಿ ನಿವಾಸಿಗೆ ಮಂಕಿ ಪಾಕ್ಸ್ ಸೋಂಕು ಕಾಣಿಸಿಕೊಂಡಿದ್ದು ಸೋಂಕು ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.
ಇದು ಭಾರತದಲ್ಲಿ ವರದಿಯಾಗುತ್ತಿರುವ ನಾಲ್ಕನೇ ಮಂಕಿ ಪಾಕ್ಸ್ ಪ್ರಕರಣ. ಈ ವ್ಯಕ್ತಿ ಇತ್ತೀಚೆಗೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಪಾರ್ಟಿಯೊಂದರಲ್ಲಿ ಭಾಗವಹಿಸಿದ್ದ ಎಂದು ಅಧಿಕೃತ ಮೂಲಗಳು ಪಿಟಿಐಗೆ ತಿಳಿಸಿವೆ.
ಪಶ್ಚಿಮ ದೆಹಲಿಯ ನಿವಾಸಿಯಾಗಿರುವ ಸೋಂಕಿತನನ್ನ ಮೂರು ದಿನಗಳ ಹಿಂದೆ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಮಂಕಿಪಾಕ್ಸ್ ರೋಗಲಕ್ಷಣಗಳಿರುವ ಕಾರಣ ಪರೀಕ್ಷೆಗೆ ಒಳಪಡಿಸಿದ ನಂತರ ಚಿಕಿತ್ಸೆಗೆ ದಾಖಲಿಸಲಾಗಿದೆ.
ಸೋಂಕಿತ ವ್ಯಕ್ತಿಯ ಮಾದರಿಗಳನ್ನು ಶನಿವಾರ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಗೆ ಕಳುಹಿಸಲಾಗಿದ್ದು, ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. “ಸಂಪರ್ಕ ಪತ್ತೆಹಚ್ಚುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ.
ಕೇರಳದಲ್ಲಿ ಈ ಹಿಂದೆ ಮೂರು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದವು. WHO ಶನಿವಾರ ಮಂಕಿಪಾಕ್ಸ್ ಅನ್ನು ಅಂತರರಾಷ್ಟ್ರೀಯ ಕಾಳಜಿಯ ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದೆ.








