ದಕ್ಷಿಣ ಕನ್ನಡ: ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವಿರುದ್ಧ ಹೋರಾಟಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಟೊಂಕ ಕಟ್ಟಿ ನಿಂತಿವೆ. ಇದರ ಭಾಗವಾಗಿಯೇ ಲಾಕ್ ಡೌನ್ ನಂತಹ ಕಠಿಣ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಇದರ ಮಧ್ಯೆ ಕೊರೊನಾ ಲಾಕ್ ಡೌನ್ ವಿರುದ್ಧ ಹೋರಾಡಲು ಸರ್ಕಾರಕ್ಕೆ ದೇಣಿಗೆ ನೀಡುವಂತೆ ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದರು. ಹೀಗಾಗಿ ಕೊರೊನಾ ನಿಯಂತ್ರಣಕ್ಕಾಗಿ ಹಲವಾರು ಕಡೆಯಿಂದ ಸರ್ಕಾರಕ್ಕೆ ದೇಣಿಗೆ ಹರಿದು ಬರುತ್ತಿದೆ. ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊರೊನಾ ನಿಯಂತ್ರಣಕ್ಕಾಗಿ ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಲಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಬಗ್ಗೆ ವೀರೇಂದ್ರ ಹೆಗ್ಗಡೆಯವರು ಪ್ರಕಟಣೆಯನ್ನೂ ಹೊರಡಿಸಿದ್ದಾರೆ. ಅಲ್ಲದೇ ಸ್ವಸಹಾಯ ಸಂಘದ ಸದಸ್ಯರಿಗೆ ಕೋವಿಡ್ ತುರ್ತು ಸಾಲ ನೀಡುವುದಾಗಿ ತಿಳಿಸಿದ್ದಾರೆ. ಸದ್ಯ ಚಾಲ್ತಿ ಸಾಲ ಇದ್ದರೂ 25 ಸಾವಿರದವರೆಗೆ ತುರ್ತು ಸಾಲ ಯೋಜನೆ ಘೋಷಣೆ ಮಾಡಿದ್ದಾರೆ.








