ಅಸನಿ ಚಂಡಮಾರುತ – ಮುಂದಿನ ಐದು ದಿನಗಳ ಕಾಲ ಮಳೆ ಸಾಧ್ಯತೆ…
ಆಗ್ನೇಯ ಬಂಗಾಳಕೊಲ್ಲಿ ಹಾಗೂ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಪ್ರಬಲ ವಾಯುಭಾರ ಕುಸಿತದ ಅಸನಿ ಚಂಡಮಾರುತ ರಾಜ್ಯಕ್ಕೆ ದಾಳಿ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದ ಹವಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮಾರ್ಚ್ 21 ರಿಂದ 24ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾಕಡೆ ಮಳೆಯಾಗಲಿದೆ. ಮಾ.24 ಮತ್ತು 25ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಮಾ 22 ಮತ್ತು 23ರಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಾ. 21ರಿಂದ ಮಾ.25ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮಾ.21 ಮತ್ತು ಮಾ.25ರಂದು ಮಾತ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
‘ಅಸಾನಿ’ ಚಂಡಮಾರುತ ಪ್ರಭಾವದಿಂದಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುತ್ತಿದೆ. ಸೋಮವಾರ(ಇಂದು) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 24 ಮಂಗಳವಾರದ ವೇಳೆಗೆ ಚಂಡಮಾರುತದ ಅಬ್ಬರ ಕಡಿಮೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.