ಚುನಾವಣೆಯಲ್ಲಿ ಸ್ಪರ್ದಿಸಲಿದ್ದಾರೆ 50 ಮಂದಿ ಸಾಧು-ಸಂತರು : ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ
ಕಾರವಾರ : ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ 50 ಮಂದಿ ಸಾಧು-ಸಂತರು ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಉಜಿರೆ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ ಹೇಳಿದ್ದಾರೆ.
ಭಟ್ಕಳದಲ್ಲಿ ನಡೆಯುತ್ತಿರುವ ಶ್ರೀ ಸಾರದ ಹೊಳೆ ಹಳೆಕೋಟೆ ಶ್ರೀಕ್ಷೇತ್ರ ಹನುಮಂತ ದೇವರ ಪುನರ್ ಪ್ರತಿಷ್ಠಾನ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿ ವ್ಯವಸ್ಥೆ ದಿಕ್ಕು ತಪ್ಪುತ್ತಿದೆ. ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ, ಮಾರ್ಕೆಟ್ ನಲ್ಲಿ ಗಲಾಟೆ ಮಾಡಿದಂತೆ ಮಾಡುತ್ತಾರೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಅಲ್ಲದೇ ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆಯಿಂದ ರಾಜ್ಯದ ವ್ಯವಸ್ಥೆಯನ್ನು ದಿಕ್ಕು ತಪ್ಪಿಸುತ್ತಿದೆ. ಇದನ್ನು ನಿಯಂತ್ರಿಸುವ ಕೆಲಸವಾಗಿಲ್ಲ. ಜನಪ್ರತಿನಿಧಿಗಳಿಗೆ ನಮ್ಮ ಸಂವಿಧಾನದ ಪ್ರಾಮುಖ್ಯತೆ ತಿಳಿದಿಲ್ಲ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಸಮಗ್ರ ಬದಲಾವಣೆಯನ್ನ ತರುವ ನಿಟ್ಟಿನಲ್ಲಿ ಈ ಬಾರಿ 50 ಮಂದಿ ಸಾಧು-ಸಂತರು ಚುನಾವಣಾ ಕಣಕ್ಕೆ ಸ್ಪರ್ಧಿಸಲು ಸಿದ್ಧರಾಗಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ಸದ್ಯದ ಬೆಳವಣಿಗೆ ಕುರಿತು ಎರಡು ಮೂರು ತಿಂಗಳಿಗೊಮ್ಮೆ ಸಾಧು-ಸಂತರು ಸೇರಿ ಚರ್ಚೆ ನಡೆಸುತ್ತೇವೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಎರಡನೇಯ ಬಾರಿ ಸ್ಪರ್ಧಿಸಿ ಆಯ್ಕೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಎರಡನೇಯ ಬಾರಿಗೆ ಸಿಎಂ ಸ್ಥಾನಕ್ಕೇರಿದ್ದಾರೆ. ಅಲ್ಲಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಕಾನೂನು ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು ಜನಮನ್ನಣೆ ಗಳಿಸಿವೆ. ಹೀಗಾಗಿ ರಾಜ್ಯದಲ್ಲಿ ಅಂತಹದ್ದೇ ಬದಲಾವಣೆ ತರುವ ನಿಟ್ಟಿನಲ್ಲಿ ಸ್ವಾಮೀಜಿಗಳು ಚಿಂತನೆಯನ್ನ ಮಾಡಿದ್ದೇವೆ ಎಂದು ತಿಳಿಸಿದರು.







