ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು (cauvery water) ನಿರ್ವಹಣಾ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಇದರ ಬೆನ್ನಲ್ಲಿಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ರೈತರು, ರಾಷ್ಟ್ರೀಯ ಹೆದ್ದಾರಿ, ರೈಲು ತಡೆದು ಹೋರಾಟಕ್ಕೆ ನಿರ್ಧರಿಸಿದ್ದಾರೆ. ಕೇಸ್ ಹಾಕಿದರೆ ಜೈಲಿಗೆ ಹೋಗಲು ಸಿದ್ಧ ಎಂದು ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ನೀರು ಹರಿಸುವುದಾದರೆ ಮಂಡ್ಯದ ರೈತರಿಗೂ ನೀರು ಹರಿಸಿ. ಕೆಆರ್ಎಸ್ ಡ್ಯಾಂ ನಿರ್ವಹಣೆ ಮಾಡುತ್ತಿರುವುದು ನಮ್ಮ ಸರ್ಕಾರ. ಕೆಆರ್ಎಸ್ ಡ್ಯಾಂ ನಿರ್ವಹಣೆಗೆ ಬೇರೆ ರಾಜ್ಯದವರು ಹಣ ನೀಡುತ್ತಿಲ್ಲ. ಆದರೆ ನೀರು ಬೇಕೆಂದು ಕೇಳುತ್ತಿದ್ದಾರೆ ಎಂದು ರೈತರು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿ ಮುಂದಿನ 15 ದಿನಗಳವರೆಗೆ 5,000 ಕ್ಯೂಸೆಕ್ ನೀರು ಹರಿಸುವಂತೆ ಹೇಳಿದೆ. ಪ್ರತಿದಿನ 24 ಸಾವಿರ ಕ್ಯೂಸೆಕ್ ಹರಿಸುವಂತೆ ವಾದಿಸಿದ್ದರು. ಆದರೆ ನಾವು ಅಷ್ಟು ನೀರು ಹರಿಸಲು ಸಾಧ್ಯವಿಲ್ಲವೆಂದು ವಾದ ಮಂಡಿಸಲಾಗಿದ್ದು, ಪ್ರತಿದಿನ 5 ಸಾವಿರ ಕ್ಯೂಸೆಕ್ ಹರಿಸಲು ತಿಳಿಸಿದೆ ಎಂದು ಹೇಳಿದ್ದಾರೆ.