ಹಿರಿಯ ನಾಗರಿಕರನ್ನು ರಕ್ಷಿಸುವ ಜವಾಬ್ದಾರಿ ಸರಕಾರ ಮತ್ತು ಸಮಾಜದ ಮೇಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 55 ವರ್ಷ ಮೇಲ್ಪಟ್ಟ ಎಲ್ಲರನ್ನೂ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಗೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಮೃತಪಟ್ಟವರು 55 ರಿಂದ 80 ವರ್ಷದೊಳಗಿನವರಾಗಿದ್ದು, ಹಿರಿಯ ನಾಗರಿಕರನ್ನು ರಕ್ಷಿಸಬೇಕಾದ ಹಾಗೂ ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಹಿರಿಯ ನಾಗರಿಕರು ಮಧುಮೇಹ, ರಕ್ತದೊತ್ತಡ, ಶ್ವಾಸಕೋಶ, ಹೃದಯ ಸಂಬಂಧಿತ ಸಮಸ್ಯೆಗಳಿಂದ ಹೆಚ್ಚಾಗಿ ಬಳಲುತ್ತಿರುತ್ತಾರೆ ಎಂದ ವೈದ್ಯಕೀಯ ಶಿಕ್ಷಣ ಸಚಿವರು, ಹಿರಿಯ ನಾಗರಿಕರು ಮನೆಯಲ್ಲೂ ಎಲ್ಲರಿಂದ ಅಂತರ ಕಾಯ್ದುಕೊಂಡು, ಮುಂಜಾಗ್ರತೆ ವಹಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇಲ್ಲಿಯವರೆಗೆ ಮೃತಪಟ್ಟವರಲ್ಲಿ ಹೆಚ್ಚಿನವರು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬಂದವರಾಗಿದ್ದಾರೆ. ಆದ್ದರಿಂದ ಹಿರಿಯ ನಾಗರಿಕರ ಅರೋಗ್ಯದಲ್ಲಿ ಸಣ್ಣ ಪುಟ್ಟ ವ್ಯತ್ಯಾಸವಾದರೂ ಕೂಡಲೇ ಕೊರೊನಾ ಪರೀಕ್ಷೆಗೆ ಒಳಪಡುವುದು ಉತ್ತಮ ಎಂದು ಸಚಿವರು ಹೇಳಿದರು. ಹಿರಿಯ ನಾಗರಿಕರನ್ನು ಮತ್ತು ಕಾಯಿಲೆಗಳಿಂದ ಬಳಲುತ್ತಿರುವವರನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದ್ದು, 55 ವರ್ಷ ಮೇಲ್ಪಟ್ಟವರು ಕಡ್ದಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡುವುದು ಸೂಕ್ತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.








