ನವದೆಹಲಿ ; ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಇದರ ಮಧ್ಯೆ ಕೊರೊನಾ ನಿಯಂತ್ರಿಸಲು ಕೇಂದ್ರ ಸರ್ಕಾರ 14 ರಾಜ್ಯಗಳಿಗೆ 6,195.08 ಕೋಟಿ ಬಿಡುಗಡೆ ಮಾಡಿದೆ. ದುರಂತವೆಂದರೆ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಿಕೊಂಡ ಮನವಿಗೆ ಮನ್ನಣೆ ಸಿಕ್ಕಿಲ್ಲ. 14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 6195.08 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಟ್ವೀಟ್ ಮಾಡಿದ್ದಾರೆ. ಕೇಂದ್ರ ಸರ್ಕಾರ 14 ರಾಜ್ಯಗಳಿಗೆ ಬಿಡುಗಡೆ ಮಾಡಿರುವ ಅನುದಾನದಲ್ಲಿ ಕರ್ನಾಟಕಕ್ಕೆ ನಯಾಪೈಸೆ ಸಿಕ್ಕಿಲ್ಲ.
ಈ ಅನುದಾನವನ್ನು ಕೊರೊನಾ ನಿಯಂತ್ರಿಸಲು ಬಳಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರಖಂಡ್, ಪಶ್ಚಿಮ ಬಂಗಾಳ, ಅಸ್ಸಾಂ, ಹಿಮಾಚಲಪ್ರದೇಶ, ಕೇರಳ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಲ್ಯಾಂಡ್ ಮತ್ತು ಪಂಜಾಬ್ ರಾಜ್ಯಗಳಿಗೆ ಹಣ ಬಿಡುಗಡೆಯಾಗಿದೆ.
ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಸಂವಾದ ನಡೆಸಿದ್ದ ಸಿಎಂ ಯಡಿಯೂರಪ್ಪನವರು ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ತುಂಬ ಹದಗೆಟ್ಟಿದ್ದು, ಹಣಕಾಸಿನ ನೆರವು ನೀಡಬೇಕೆಂದು ಮನವಿ ಮಾಡಿದ್ದರು.








