ಬೆಂಗಳೂರು: ಕೇಂದ್ರ ಬಜೆಟ್ನಲ್ಲಿ (Union Budget 2024) ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಮಲತಾಯಿ ಧೋರಣೆಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟವಾಗಿದೆ. ಈ ನಿಟ್ಟಿನಲ್ಲಿ ಫೆ.7 ರಂದು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಸ್ಥಳಾವಕಾಶದ ಕುರಿತು ಪತ್ರ ಬರೆಯಲಾಗಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 47 ಲಕ್ಷ ಕೋಟಿ ರೂ. ಆಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ರೂ. ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ರೂ. ಮಾತ್ರ. ದೇಶದಲ್ಲಿ ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ಆದರೆ, ನ್ಯಾಯಯುತವಾಗಿ ನಮ್ಮ ಪಾಲು ಸಿಗುತ್ತಿಲ್ಲ. ಬಿಜೆಪಿ ಸಂಸದರು ಮೌನ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.