ಕಂದಕಕ್ಕೆ ಬಿದ್ದ ಕಾರು – ಬಾಲಕಿ ಸೇರಿದಂತೆ ಎಂಟು ಮಂದಿ ಮೃತ
ಕಾರು ಕಂದಕಕ್ಕೆ ಬಿದ್ದ ಪರಿಣಾಮ ಅಪ್ರಾಪ್ತ ಬಾಲಕಿ ಸೇರಿದಂತೆ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಬುಂಡಾ ಪ್ರದೇಶದಲ್ಲಿ ನಡೆದ ಕಾರು ಅಪಘಾತದಲ್ಲಿ ಇಲ್ಲಿಯವರೆಗೆ 3 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
“ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ನಾವು ಅಗತ್ಯ ಪರಿಹಾರವನ್ನು ನೀಡುತ್ತೇವೆ ಮತ್ತು ಅವರ ಚಿಕಿತ್ಸೆಯ ವೆಚ್ಚವನ್ನು ಭರಿಸುತ್ತೇವೆ.” ಎಂದು ದೇವಾಂಶ್ ಯಾದವ್, ಡಿಸಿ, ಕಿಶ್ತ್ವಾರ್, ತಿಳಿಸಿದ್ದಾರೆ. ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.
ಇದಕ್ಕೂ ಮುನ್ನ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿತ್ತು. ಗಾಯಗೊಂಡ ವ್ಯಕ್ತಿಗಳಲ್ಲಿ ಒಬ್ಬರು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸುವಾಗ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿನ ಸಂಖ್ಯೆ 7 ರಿಂದ 8 ಕ್ಕೆ ತಲುಪಿದೆ.
ಟ್ವಿಟರ್ನಲ್ಲಿ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡ ವ್ಯಕ್ತಿಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದಾರೆ.








