2025-26ರವರೆಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ವಿಸ್ತರಣೆ Agriculture Shrimp Scheme saaksha tv
ನವದೆಹಲಿ : ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು 2025-26ರವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ.
ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಸೆಮಿಕಂಡಕ್ಟರ್ ಚಿಪ್ ಉತ್ಪಾದನೆಗೆ ಪ್ರೋತ್ಸಾಹ ಯೋಜನೆ ಸೇರಿದಂತೆ ಹಲವು ಮಹತ್ವದ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು 2025-26ರವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಅಲ್ಲದೇ ಈ ಯೋಜನೆಯಿಂದ 22 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಅವರ ಜೀವನಮಟ್ಟ ಸುಧಾರಣೆಯಾಗಲಿದೆ ಎಂದರು.
ಇದಾದ ಬಳಿಕ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಾತನಾಡಿ, ಸೆಮಿಕಂಡಕ್ಟರ್ ಚಿಪ್ ಉತ್ಪಾದನೆಗೆ 76 ಸಾವಿರ ಕೋಟಿ ರೂಪಾಯಿಗಳ ಪ್ರೋತ್ಸಾಹ ಯೋಜನೆ ಮತ್ತು ರುಪೇ ಡೆಬಿಟ್ ಕಾರ್ಡ್ ಮತ್ತು ಭೀಮ್ ಯುಪಿಐ ವಹಿವಾಟಿಗೆ ಪ್ರೋತ್ಸಾಹಧನ ನೀಡುವ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಸೆಮಿಕಂಡಕ್ಟರ್ ಚಿಪ್ ಉತ್ಪಾದಿಸಲು ಬಯಸುವ ಯಾವುದೇ ಕಂಪನಿಗೆ ವಿನ್ಯಾಸ ಸೇರಿದಂತೆ ಶೇಕಡ 50ರಷ್ಟು ಸಹಾಯಧನವನ್ನು ಸರ್ಕಾರ ನೀಡಲಿದೆ ಎಂದರು.








