ರಾಜ್ಯ ಸರ್ಕಾರದಿಂದ ಹಿಂದೂ ವಿರೋಧಿ ನೀತಿ : ಮುತಾಲಿಕ್ ಆಕ್ರೋಶ
ಧಾರವಾಡ : ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಟಾಪನೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಹಿರಂಗ ಧಾರ್ಮಿಕ ಸಭೆ-ಸಮಾರಂಭ ಹಬ್ಬಗಳಿಗೆ ನಿಬರ್ಂಧ ವಿಧಿಸಲಾಗಿದೆ. ಅದರಲ್ಲೂ ಗಣೇಶ ಚತುರ್ಥಿಗೆ ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಟಾಪನೆ ಮಾಡಬಾರದು ಎಂದು ಸರ್ಕಾರ ಆದೇಶಿಸಿದೆ. ಇದಕ್ಕೆ ಶ್ರೀ ರಾಮ ಸೇನೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಲೆ ಇದೆ.
ಅದರ ಮುಂದುವರೆದ ಭಾಗವಾಗಿ ಇಂದು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಶ್ರೀರಾಮಸೇನೆ ಕಾರ್ಯಕರ್ತರು, ಗಣೇಶ ಮೂರ್ತಿ ಇಟ್ಟು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡೆಯೇ ತೀರುತ್ತೇವೆ ಎಂದು ಘೋಷಿಸಿದರು.
ಈ ವೇಳೆ ಮಾತನಾಡಿದ ಪ್ರಮೋದ್ ಮುತಾಲಿಕ್, ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಎಲ್ಲದಕ್ಕೂ ಅವಕಾಶ ನೀಡಲಾಗಿದೆ. ಆದರೆ ಸಾರ್ವಜನಿಕ ಗಣೇಶೋತ್ಸವ ನಿಷೇಧ ಮಾಡಿದ್ದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು..









