ದೇಶಾದ್ಯಂತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಬಿಸಿಯೂಟ ಯೋಜನೆಗೆ ಅನುಮೋದನೆ..!
ದೇಶಾದ್ಯಂತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ( 8ನೇ ತರಗತಿಯವರೆಗೂ) ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಬಿಸಿಯೂಟ ಒದಗಿಸುವ ‘ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್’ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ ಸಭೆಯಲ್ಲಿ ಈ ಯೋಜನೆಗೆ ಅನುಮೋದನೆ ನೀಡಲಾಗಿದೆ. ಇನ್ನೂ ಪ್ರಸ್ತುತ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಲ್ಲಿ ವಿಲೀನಗೊಳಿಸಲಾಗುವುದು.
ಅಲ್ಲದೇ ಈ ಯೋಜನೆಯಡಿ 2021–22 ರಿಂದ 2025–26 ವರೆಗೆ ಮಕ್ಕಳಿಗೆ ಬಿಸಿಯೂಟದ ಸೌಲಭ್ಯ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರು ಸಭೆ ಬಳಿಕ ತಿಳಿಸಿದ್ದಾರೆ. ಈ ಯೋಜನೆಯ ಮೂಲಕ ದೇಶದ 11.20 ಲಕ್ಷ ಶಾಲೆಗಳ 11.80 ಕೋಟಿ ಮಕ್ಕಳಿಗೆ ಲಾಭ ಸಿಗಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನದ ಮುಖವಾಡ ಕಳಚಿದ ಉಗ್ರ – 20 ಸಾವಿರ ಕೊಟ್ಟಿದ್ದ ಬಗ್ಗೆ ತಪ್ಪೊಪ್ಪಿಕೊಂಡ..!
ಅಷ್ಟೇ ಅಲ್ದೇ ಹಬ್ಬ ಹಾಗೂ ವಿಶೇಷ ದಿನಗಳಂದು ಶಾಲಾ ಮಕ್ಕಳಿಗೆ ವಿವಿಧ ಬಗೆಯ ಊಟ ನೀಡಲು ಅವಕಾಶ ನೀಡುವ ವಿಶೇಷ ಕಾರ್ಯಕ್ರಮವನ್ನು ಈ ಯೋಜನೆ ಒಳಗೊಂಡಿದೆ ಎನ್ನಲಾಗಿದೆ. ಮುಖ್ಯವಾಗಿ ಶಾಲೆಗಳಲ್ಲಿರುವ ಕೈತೋಟಗಳಲ್ಲಿ ಬೆಳೆದ ತರಕಾರಿ, ಬೆಳೆಗಳನ್ನು ಬಳಸಿ ಮಧ್ಯಾಹ್ನದ ಬಿಸಿಯೂಟ ತಯಾರಿಸುವುದು, ಸಾಂಪ್ರದಾಯಿಕ ಅಡುಗೆ ಸ್ಪರ್ಧೆ ಆಯೋಜನೆಯನ್ನು ಪ್ರೋತ್ಸಾಹಿಸಲಾಗುವುದು ಕೂಡ ಈ ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ.








