ಟೈರ್ ಬದಲಿಸುತ್ತಾ ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು, ಸ್ಥಳದಲ್ಲೇ 16 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಲಖನೌ – ಆಗ್ರ ಹೆದ್ದಾರಿ ಬಳಿ ನಡೆದಿದೆ.
ಬಿಹಾರದ ಮೋತಿಹರಿ ಜಿಲ್ಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ 31 ಮಂದಿ ಪ್ರಯಾಣಿಕರನ್ನ ಸ್ಥಳೀಯ ಸೈಫೈ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಇನ್ನು, ಅಪಘಾತ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಅಪಘಾತ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಯೋಗಿ ಆದಿತ್ಯನಾಥ್ ಅಗತ್ಯಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.







