ಪೆಟ್ರೋಲ್ ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಕಡಿತ ಮೋದಿ ಅವರು ತೆಗೆದುಕೊಂಡಿರುವ ಪ್ರಮುಖ ನಿರ್ಧಾರ – ಅಮಿತ್ ಶಾ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪೆಟ್ರೋಲ್ ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನ ಕಡಿಮೆ ಮಾಡಿ ಸಾಮಾನ್ಯ ಜನರಿಗೆ ಸ್ವಲ್ಪ ಮಟ್ಟಿಗೆ ರಿಲೀಫ್ ನೀಡಿವೆ. ಈ ಕ್ರಮವನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕಡಿಮೆ ಮಾಡಿರುವುದು ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ಪ್ರಮುಖ ನಿರ್ಧಾರವಾಗಿದೆ. ಈ ಕ್ರಮ ಸಾಮಾನ್ಯ ಜನರಿಗೆ ಸಮಾಧಾನ ತರುವ ಜೊತೆಗೆ ಹಣದುಬ್ಬರವನ್ನೂ ಕಡಿಮೆ ಮಾಡಲಿದೆ ಎಂದಿದ್ದಾರೆ.
ಇದೇ ವೇಳೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕ್ರಮವಾಗಿ 5 ಹಾಗೂ 10 ರೂಪಾಯಿ ಕಡಿಮೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಸಂದರ್ಭದಲ್ಲಿ ಜನರಿಗೆ ಸಮಾಧಾನ ತಂದಿದ್ದಾರೆ ಎಂದು ಅಮಿತ್ ಶಾ ಅವರು ಟ್ವೀಟ್ ಮಾಡಿಕೊಂಡಿದ್ದಾರೆ. ಅಲ್ಲದೇ ಬಿಜೆಪಿ ಆಡಳಿತ ಇರುವ ರಾಜ್ಯಗಳು ಸಹ ಇಂಧನ ದರಗಳಲ್ಲಿ ಮತ್ತಷ್ಟೂ ಕಡಿತಗೊಳಿಸುವ ಮೂಲಕ ಉತ್ತಮ ಕಾರ್ಯ ಮಾಡಿವೆ ಎಂದಿದ್ದಾರೆ. ಇನ್ನೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಹೆಚ್ಚಾಗುತ್ತಿದ್ದರೂ, ತೈಲೋತ್ಪನ್ನಗಳ ಮೇಲಿನ ಎಕ್ಸೈಸ್ ಸುಂಕವನ್ನು ಕಡಿಮೆ ಮಾಡುವ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿರುವುದಕ್ಕಾಗಿ ನಾನು ಮೋದಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.








