ಬಸ್ ಮತ್ತು ಆಯಿಲ್ ಟ್ಯಾಂಕರ್ ನಡುವೆ ಡಿಕ್ಕಿ 12 ಮಂದಿ ಸಜೀವ ದಹನ
ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಪಚ್ಪದ್ರ ಬಳಿ ಪ್ರಯಾಣಿಕರ ಬಸ್ ಮತ್ತು ಟ್ರಕ್ ಪರಸ್ಪರ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾರ್ಮರ್-ಜೋಧ್‌ಪುರ ರಾಷ್ಟ್ರೀಯ ಹೆದ್ದಾರಿಯ ಭಂಡಿಯಾವಾಸ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯ ನಂತರ ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ . ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣ ಜಖಂಗೊಂಡಿದೆ. ಗಂಟೆಗಳ ನಂತರವೂ ರಕ್ಷಣಾ ತಂಡಗಳು ಬಸ್‌ನೊಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಮತ್ತು ಗಾಯಾಳುಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡಲಾಗುವುದು ಎಂದು ಗೆಹ್ಲೋಟ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ
ಘಟನೆಯಲ್ಲಿ ಸಾವಿಗೀಡಾದವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಬಂಧಿಕರಿಗೆ PMNRF ನಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿಗಳನ್ನು ನೀಡುವುದಾಗಿ ಹೇಳಿದ್ದಾರೆ.








