ಮಳೆ ಆರ್ಭಟಕ್ಕೆ ತತ್ತರಿಸಿದ ಆಂಧ್ರ ಕನಿಷ್ಟ 17 ಸಾವು 100 ಜನ ಕಾಣೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು ಆಂಧ್ರಪ್ರದೇಶದ ಚಿತ್ತೂರು, ಕಡಪ, ಕರ್ನೂಲ್ ಮತ್ತು ಅನಂತಪುರದ ನಾಲ್ಕು ರಾಯಲಸೀಮಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹಕ್ಕೆ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ನಾಲ್ಕು ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ 100ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸುಮಾರು ಏಳು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (ಎನ್‌ಡಿಆರ್‌ಎಫ್) ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಜೊತೆಗೆ ಪೊಲೀಸ್, ಕಂದಾಯ ಮತ್ತು ಅಗ್ನಿಶಾಮಕ ಇಲಾಖೆಯ ತಂಡಗಳನ್ನು ನಿಯೋಜಿಸಲಾಗಿದೆ.
ಚೆಯ್ಯೂರು ನದಿ ಉಕ್ಕಿ ಹರಿಯುತ್ತಿದ್ದಂತೆ, ಅನ್ನಮಯ್ಯ ನೀರಾವರಿ ಯೋಜನೆಯಿಂದ ರಾಜಂಪೇಟೆ ವಿಧಾನಸಭಾ ಕ್ಷೇತ್ರ ಮತ್ತು ಕಡಪ ಜಿಲ್ಲೆಯ ಹಲವು ಗ್ರಾಮಗಳಿಗೆ ನೀರು ಹರಿದಿದೆ.








