ಶಾಲಾ-ಕಾಲೇಜು ಮುಚ್ಚುವ ಬಗ್ಗೆ ಬಿ.ಸಿ.ನಾಗೇಶ್ ಸ್ಪಷ್ಟನೆ BC Nagesh saaksha tv
ಬೆಂಗಳೂರು : ರಾಜ್ಯದಲ್ಲಿ ಕಳೆದರೆಡು ದಿನಗಳಿಂದ ಕೊರೊನಾ ಸೋಂಕು ಇಳಿಮುಖವಾಗಿದೆ. ಹೀಗಾಗಿ ಶಾಲಾ-ಕಾಲೇಜುಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದು ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದರ್ಶನ್ ನೇತೃತ್ವದ ತಾಂತ್ರಿಕ ಸಮಿತಿ ಕೋವಿಡ್ ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇಟ್ಟಿದ್ದು, ರಾಜ್ಯ ಸರ್ಕಾರಕ್ಕೆ ಕಾಲಕಾಲಕ್ಕೆ ವರದಿ ಮಾಡುತ್ತಿದೆ. ಎರಡು ದಿನಗಳಿಂದ ಸೋಂಕು ಇಳಿಮುಖವಾಗಿದೆ. ಒಂದರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿಲ್ಲ. ಪಿಯುಸಿ ಮಟ್ಟದ ಕಾಲೇಜುಗಳಲ್ಲಿ ಕೆಲವೆಡೆ ಸೋಂಕಿನ ಪ್ರಕರಣಗಳು ವರದಿಯಾಗಿವೆ. ವಸತಿ ಶಾಲೆ ಮತ್ತು ಇನ್ನಿತರ 8 ಸಂಸ್ಥೆಗಳಲ್ಲಿ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಇನ್ನು ವಿದ್ಯಾರ್ಥಿಗಳು ಆರೋಗ್ಯವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದರು. ವಸತಿ ಶಾಲೆ, ಹಾಸ್ಟೆಲ್ ಗಳು ಮತ್ತು ಶಾಲಾ-ಕಾಲೇಜುಗಳಲ್ಲಿ ಪ್ರಮಾಣೀತ ಮಾರ್ಗಸೂಚಿಗಳ ಪಾಲನೆ ಕುರಿತು ಪರಿಶೀಲನೆ ನಡೆಸಲು ಜಂಟಿ ಸಮಿತಿ ರಚಿಸಲಾಗುತ್ತಿದೆ. ಅದರಲ್ಲಿ ಆರೋಗ್ಯ ಇಲಾಖೆಯ ತಾಲೂಕು ಆರೋಗ್ಯ ಅಧಿಕಾರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ನೇತೃತ್ವ ವಹಿಸಲಿದ್ದಾರೆ. ಈ ಸಮಿತಿ ಸದಸ್ಯರು ಕಾಲಕಾಲಕ್ಕೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ವರದಿ ನೀಡಲಿದ್ದಾರೆ ಎಂದು ತಿಳಿಸಿದರು.









