ಬೆಂಗಳೂರು : ಕೊರೊನಾ ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಜೂನ್ 25 ರಿಂದ ಜುಲೈ 4 ರವರೆಗೆ, ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಜೂನ್ 18ರಂದು ನಡೆಯಲಿವೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್, ಎಸ್ ಎಸ್ ಎಲ್ ಸಿಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿರಲಿದೆ. ಒಟ್ಟಾರೆ ಎಲ್ಲಾ ಪರೀಕ್ಷೆಗಳು 10 ದಿನದಲ್ಲಿ ಮುಗಿಯಲಿದೆ ಎಂದರು.
ಇನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಬದಲಾದ ಪರಿಸ್ಥಿತಿಯಲ್ಲಿ ಹೆಚ್ಚುವರಿ ಕೊಠಡಿ ಬಳಸುತ್ತೇವೆ. 2879 ಪರೀಕ್ಷಾ ಕೇಂದ್ರಗಳಲ್ಲಿ 43720 ಕೊಠಡಿ ಬಳಸುತ್ತಿದ್ದೇವೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ. ಎಲ್ಲಾ ವಿದ್ಯಾರ್ಥಿಗಳು ಸ್ಯಾನಿಟೈಸರ್ ಬಳಸಬೇಕು, ಇದಕ್ಕಾಗಿ ರಾಜ್ಯ ಸ್ಕೌಟ್ ಮತ್ತು ಗೈಡ್ಸ್ ನ ಸಹಾಯ ದೊರೆಯಲಿದೆ. ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುತ್ತೇವೆ. ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ ಎಂದರು.
ಮೊರಾರ್ಜಿ ದೇಸಾಯಿ ಶಾಲೆ, ಎಸ್ ಸಿ, ಎಸ್ ಟಿ ಹಾಸ್ಟಲ್ ಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ಹತ್ತಿರದ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುವುದು. ವಲಸೆ ಕಾರ್ಮಿಕರ ಮಕ್ಕಳಿಗೆ ಕೂಡಾ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.








