ಬೆಂಗಳೂರು, ಮೇ19 : ಕೊರೋನಾ ಸೋಂಕು ವೇಗವಾಗಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮೂರು ರಾಜ್ಯದ ಜನರಿಗೆ ಮೇ 31ರವರೆಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ರಾಜ್ಯದ ಜನರು ಕರ್ನಾಟಕ ರಾಜ್ಯವನ್ನು ಪ್ರವೇಶಿಸುವುದನ್ನು ನಿಷೇಧಿಸಿರುವುದಾಗಿ ವರದಿ ತಿಳಿಸಿದೆ. ಭಾರತದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿರುವುದು ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡಿನಲ್ಲಿ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಪರಸ್ಪರ ಒಪ್ಪಿಗೆ ಮೇರೆಗೆ ಜನರಿಗೆ ಅಂತರ್ ರಾಜ್ಯ ಪ್ರವೇಶಕ್ಕೆ ಒಪ್ಪಿಗೆ ನೀಡಿದೆ.
ಹಾಗಾಗಿ ಕರ್ನಾಟಕ ರಾಜ್ಯ ಸರ್ಕಾರ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿರುವ ರಾಜ್ಯಗಳ ಜನರಿಗೆ ಪ್ರವೇಶ ನಿಷೇಧಿಸಿದೆ. ಕರ್ನಾಟಕದಲ್ಲಿ ಕಳೆದ 24ಗಂಟೆಯಲ್ಲಿ 84 ಹೊಸ ಪ್ರಕರಣಗಳು ವರದಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 1,231 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ಲಾಕ್ ಡೌನ್ ಮೇ 31ರವರೆಗೆ ವಿಸ್ತರಣೆಯಾಗಿದ್ದು, ಕಂಟೈನ್ ಮೆಂಟ್ ಮತ್ತು ರೆಡ್ ಜೋನ್ ಹೊರತುಪಡಿಸಿ ಉಳಿದ ಕಡೆ ಎಲ್ಲಾ ಸರ್ಕಾರಿ ಬಸ್ ಗಳು ಸಂಚರಿಸಲು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಿಂದ ಬಸ್ ನಲ್ಲಿ ಕೇವಲ 30 ಜನಕ್ಕೆ ಮಾತ್ರ ಪಯಣಿಸಲು ಅವಕಾಶ ಕಲ್ಪಿಸಲಾಗಿದೆ.