ನಂದಿಬೆಟ್ಟಕ್ಕೆ ಶೀಘ್ರವೇ ರೋಪ್ ವೇ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು: ಆನಂದ್ ಸಿಂಗ್ Saaksha Tv
ಚಿಕ್ಕಬಳ್ಳಾಪುರ: ನಂದಿಬೆಟ್ಟಕ್ಕೆ ಶೀಘ್ರವೇ ರೋಪ್ ವೇ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಬುಧವಾರ ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆನಂದ್ ಸಿಂಗ್ ರೋಪ್ ವೇ ಯೋಜನೆಗೆ ಸಂಬಂಧಿಸಿದಂತೆ ತಿಂಗಳಾಂತ್ಯಕ್ಕೆ ಟೆಂಡರ್ ಆಹ್ವಾನಿಸಲಾಗುವುದು. ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಹಾಗೇ ನಂದಿ ಬೆಟ್ಟದ ಪ್ರಕೃತಿ ಸೌಂದರ್ಯ ಸವಿಯಲು ಸಾವಿರಾರು ಮಂದಿ ಪ್ರವಾಸಿಗರು ಪ್ರತಿ ನಿತ್ಯ ಭೇಟಿ ಕೊಡುತ್ತಾರೆ. ಇಲ್ಲಿ ಯಾವುದೇ ಮೂಲಸೌಕರ್ಯಕ್ಕೆ ಕೊರತೆಯಾಗದಂತೆ ಕ್ರಮವಹಿಸಲಾಗುತ್ತದೆ ಶೌಚಾಲಯ ಮತ್ತು ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ಶೀಘ್ರವೇ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು.
ಇಲ್ಲಿಗೆ ಬರುವ ಪ್ರವಾಸಿಗರಿಗೆ ಇಲ್ಲಿನ ಕಲೆ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ‘ಕಲಾಧಾಮ’ ಎಂಬ ಚಟುವಟಿಕೆ ಆರಂಭಿಸುವ ಬಗ್ಗೆ ಚಿಂತಿಸಲಾಗಿದೆ. ಇದರಿಂದಾಗಿ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಉದ್ಯೋಗ ದೊರಕಿಸಿಕೊಟ್ಟಂತಾಗುತ್ತದೆ. ಹಾಗೇ ವೃದ್ಧರು ಹಾಗೂ ವಿಕಲಚೇತನರಿಗೆ ಬೆಟ್ಟದ ಸೌಂದರ್ಯ ಸವಿಯಲು ಬ್ಯಾಟರಿ ಚಾಲಿತ ವಾಹನದ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದರು.








