Siddaramaiah | ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ತಕ್ಷಣ ವಿರೋಧ ಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಂ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ರಾಜ್ಯದ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡಾ ಸಂಗ್ರಹಿಸಿದೆ. ರಾಜ್ಯ ಬಿಜೆಪಿ ಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಂ ಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು.
ಸಾಮಾಜಿಕ-ಆರ್ಥಿಕ ಸಮೀಕ್ಷೆಗಾಗಿ ಪ್ರತ್ಯೇಕ ಆಯೋಗ ರಚಿಸಲು ಹೇಳಿರುವ ಸುಪ್ರೀಂ ಕೋರ್ಟ್ ‘ರಾಜ್ಯ ಸರ್ಕಾರಗಳು ಈಗಾಗಲೇ ನಡೆಸಿರುವ ಸಮೀಕ್ಷೆಯ ಅಂಕಿ-ಅಂಶ ಮತ್ತು ಮಾಹಿತಿಯನ್ನು ಹೊಸ ಆಯೋಗಕ್ಕೆ ನೀಡಬಹುದು. ಆ ಮಾಹಿತಿಯನ್ನು ಆಧರಿಸಿ 2 ವಾರದೊಳಗೆ ಆಯೋಗ ಹಿಂದುಳಿದ ಜಾತಿಗಳ ಮೀಸಲಾತಿ ಬಗ್ಗೆ ಮಧ್ಯಂತರ ವರದಿಯನ್ನು ನೀಡಬಹುದು’ ಎಂದು ಕೂಡಾ ಹೇಳಿದೆ.
ಸುಪ್ರೀಂ ಕೋರ್ಟ್ನ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ.
ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ನಮ್ಮ ಸರ್ಕಾರ ದೇಶದಲ್ಲಿಯೇ ಮೊದಲ ಬಾರಿ ಮನೆಮನೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧವಾಗಿದೆ.
ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಲು ಪ್ರತ್ಯೇಕವಾದ ಆಯೋಗವನ್ನು ರಚಿಸಬೇಕೆಂದು ಹೇಳಿದೆ. ಆದರೆ ಕರ್ನಾಟಕದಲ್ಲಿ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಇದೇ ಉದ್ದೇಶದಿಂದ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ.
ರಾಜ್ಯದ ಬಿಜೆಪಿ ಸರ್ಕಾರ ಕಾಲವ್ಯಯಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ತನ್ನ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿರುವುದರಿಂದ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು.
2010ರಲ್ಲಿಯೇ ಸುಪ್ರೀಂ ಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು
ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂ ಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದಕ್ಕೆ ಕರ್ನಾಟಕದಲ್ಲಿ ನಡೆದಂತ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ.
ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧವಿರುವುದರಿಂದ ಸುಪ್ರೀಂ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು.
ಸುಪ್ರೀಂ ಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್ – ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಬಿಜೆಪಿ ಸರ್ಕಾರ ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ಧೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು.
ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ.
ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದ ಕಾರಣಕ್ಕೆ ನ್ಯಾಯಬದ್ಧ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಂ ಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ ಎಂದು ವಿವರಿಸಿದ್ದಾರೆ.
Siddaramaiah Justice should be provided to the backward castes saaksha tv









