ಉಡುಪಿ, ಮೇ 24 : ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಅಜೆಕಾರಿನ ಚೆಕ್ ಪೋಸ್ಟ್ ಗಳಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದ ಎರಡೂ ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆ ಮತ್ತು ಅಜೆಕಾರು ಠಾಣೆಯ ಎಎಸ್ ಐ ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರು ಚೆಕ್ ಪೋಸ್ಟ್ ಗಳಲ್ಲಿ, ಹೈವೇ ಪೆಟ್ರೋಲ್ ಗಳಲ್ಲಿ ಕಾರ್ಯ ನಿರ್ವಹಿಸಿದ್ದರು ಎನ್ನಲಾಗಿದೆ.
ಎಪ್ರಿಲ್ ತಿಂಗಳಲ್ಲಿ ಬಂಟ್ವಾಳ ಆಸ್ಪತ್ರೆಯಲ್ಲಿ ಕಾರ್ಕಳದ ಕಾನ್ ಸ್ಟೇಬಲ್ ಅವರ ಪತ್ನಿ ದಾಖಲಾಗಿದ್ದರು ಮತ್ತು ಕಾನ್ ಸ್ಟೇಬಲ್ ಈ ಹಿಂದೆ ಸಚ್ಚೇರಿಪೇಟೆ ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸಿದ್ದರು.
ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲಾ ಪೊಲೀಸ್ ಸಿಬ್ಬಂದಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಮತ್ತು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಮತ್ತು ಆರೋಗ್ಯ ಅಧಿಕಾರಿಯವರು ನಿರ್ಧರಿಸುತ್ತಾರೆ ಎಂದು ಎಸ್ ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.








