ಪಾಕಿಸ್ತಾನದಲ್ಲಿ ಸಿಖ್ ಸಮುದಾಯಕ್ಕೆ ಸೇರಿದ ಇಬ್ಬರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ.
ಈ ಘಟನೆ ಖೈಬರ್ ಪಖ್ತುಂಖ್ವಾ ಪ್ರದೇಶದ ಉಪನಗರವಾದ ಪೇಶಾವರದ ಸರ್ಬಂದ್ ಪ್ರದೇಶದಲ್ಲಿ ನಡೆದಿದೆ..
ಗುಂಡಿನ ದಾಳಿಗೆ ಬಲಿಯಾದವರನ್ನು ಸಲ್ಜೀತ್ ಸಿಂಗ್ (42) ಹಾಗೂ ರಂಜೀತ್‌ಸಿಂಗ್ (38) ಎಂದು ಗುರುತಿಸಲಾಗಿದೆ. ಈ ಇಬ್ಬರೂ ತಮ್ಮ ಅಂಗಡಿಯಲ್ಲಿ ಕುಳಿತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ನಾಕಾ ಬಂಧಿ ಹೇರಿರೋದಾಗಿ ವರದಿಯಾಗಿದೆ.
ಸಿಖ್ ಸಮುದಾಯದ ವ್ಯಾಪಾರಿಗಳ ಹತ್ಯೆಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಪ್ರತಿಭಟನೆಯನ್ನೂ ದಾಖಲಿಸಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್‌ಮಾನ್, ಮಾಜಿ ಸಿಎಂ ಅಮರಿಂದರ್ ಸಿಂಗ್ ಹಾಗೂ ಭಾರತದ ವಿದೇಶಾಂಗ ಸಚಿವಾಲಯವೂ ತೀವ್ರವಾಗಿ ಖಂಡಿಸಿದೆ.
ಘಟನೆ ಕುರಿತು ಮಾತನಾಡಿರುವ ವಿದೇಶಾಂಗ ಸಚಿವಾಲಯದ ವಕ್ತಾರರು, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ಸರಣಿ ಹತ್ಯೆ ಮುಂದುವರಿದಿದೆ. ಈ ಹತ್ಯೆ ಬಗ್ಗೆ ಪಾಕಿಸ್ತಾನ ಸರ್ಕಾರದ ವಿರುದ್ಧ ಬಲವಾದ ಪ್ರತಿಭಟನೆ ದಾಖಲಿಸಿದ್ದೇವೆ. ಈ ವಿಷಯವನ್ನು ಪ್ರಾಮಾಣಿಕವಾಗಿ ತನಿಖೆ ಮಾಡಲು ಹಾಗೂ ಕೃತ್ಯ ಎಸಗಿದ ನೀಚರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಾವು ಕರೆ ನೀಡುತ್ತೇವೆ ಎಂದು ಹೇಳಿದ್ದಾರೆ.








