ಬೆಂಗಳೂರು : ಮೈ ಶುಗರ್ ಸಕ್ಕರೆ ಕಾರ್ಖಾನೆಯನ್ನು ಪುನಶ್ವೇತನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹೇಳಿದ್ದಾರೆ. ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಮಂಡ್ಯ ಜಿಲ್ಲೆಯ ಶಾಸಕರ ನಿಯೋಗವು ಭೇಟಿಯಾಗಿ, ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಒತ್ತು ನೀಡಬೇಕು. ಮೈ ಶುಗರ್ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಯುವಂತೆ. ಆ ಮೂಲಕ ರೈತರ ಹಿತ ಕಾಪಾಡಬೇಕು ಎಂದು ನಿಯೋಗ ಮನವಿ ಮಾಡಿತು. .
ನಿಯೋಗದ ಮನವಿಯನ್ನು ಆಲಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮೈ ಶುಗರ್ ಸಕ್ಕರೆ ಕಾರ್ಖಾನೆಯನ್ನು ಪುನಶ್ವೇತನಗೊಳಿಸಲು ಸರ್ಕಾರ ಬದ್ಧವಾಗಿದೆ. ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಹಾಗೂ ಸರ್ಕಾರವೇ ಕಾರ್ಖಾನೆಯ ಸಂಪೂರ್ಣ ನಿರ್ವಹಣೆ ಮಾಡುವುದರ ಸಾಧಕ ಬಾಧಕಗಳ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಭರವಸೆ ನೀಡಿದರು. ಈ ವೇಳೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ತೋಟಗಾರಿಕೆ ಸಚಿವ ನಾರಾಯಣ ಗೌಡ, ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಡಿ ಸಿ ತಮ್ಮಣ್ಣ, ಶಾಸಕರಾದ ಅನ್ನದಾನಿ, ಕೆ ಟಿ ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ರೈತ ನಾಯಕಿ ಸುನಂದಾ ಜಯರಾಂ ಉಪಸ್ಥಿತರಿದ್ದರು.








