ನ್ಯಾಷನಲ್ ಹೆರಾಲ್ಡ್ ಪ್ರಕರಣ – ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಗೆ ED ಸಮನ್ಸ್…
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಜೂನ್ 2 ರಂದು ರಾಹುಲ್ ಗಾಂಧಿ ಮತ್ತು ಜೂನ್ 8 ರಂದು ಸೋನಿಯಾ ಗಾಂಧಿ ವಿಚಾರಣೆಗೆ ಆಗಮಿಸಬೇಕೆಂದು ಸಮನ್ಸ್‌ನಲ್ಲಿ ತಿಳಿಸಲಾಗಿದೆ.
ಕಾಂಗ್ರೆಸ್ ಪಕ್ಷದ ಸಂಸದ ಅಭಿಷೇಕ್ ಮನು ಸಿಂಘ್ವಿ ಸುದ್ದಿಗೋಷ್ಠಿ ನಡೆಸಿ ಇದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸೋನಿಯಾ ಗಾಂಧಿ ಹೇಳಿದ ದಿನಾಂಕದಂದು ಅಗತ್ಯವಿದ್ದಲ್ಲಿ ಹಾಜರಾಗುತ್ತಾರೆ. ಆದರೆ, ಪಕ್ಷವು ತನಿಖಾ ಸಂಸ್ಥೆಗೆ ಪತ್ರ ಬರೆದು ರಾಹುಲ್ ಗಾಂಧಿಗೆ ಕಾಲಾವಕಾಶ ನೀಡುವಂತೆ ಕೋರಲಾಗುವುದು ಎಂದು ಅವರು ತಿಳಿಸಿದ್ದಾರೆ.
2012 ರಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫೆರ್ನಾಂಡಿಸ್, ಸುಮನ್ ದುಬೆ ಮತ್ತು ಸ್ಯಾಮ್ ಪಿತ್ರೋಡಾ ವಿರುದ್ಧ ದೂರು ಸಲ್ಲಿಸಿದ್ದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಪಡೆಯುವಲ್ಲಿ ವಂಚನೆ ಮಾಡಲಾಗಿದ್ದು, ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ತನಿಖೆಗೆ ಮನವಿ ಮಾಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೂ ಸಮನ್ಸ್ ಜಾರಿ ಮಾಡಲಾಗಿತ್ತು.








