ದೇಶದಲ್ಲಿ ಕೊರೊನಾ ಆರ್ಭಟ ; 24 ಗಂಟೆಯಲ್ಲಿ ದೇಶದ 7,964 ಮಂದಿಗೆ ಕೊರೊನಾ
ನವದೆಹಲಿ : ದೇಶದಲ್ಲಿ ಕೊರೊನಾಸುರನ ಆರ್ಭಟ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ 7,964 ಜನರಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ 1,73,763 ಜನರಿಗೆ ಸೋಂಕು ದೃಢಪಟ್ಟಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ದೇಶದಲ್ಲಿ ಈವರೆಗೂ 1,73,763 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 86,422 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 82,370 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 4,971 ಮಂದಿ ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಸತತ ಎರಡನೇ ಬಾರಿಗೆ 7,000ಕ್ಕೂ ಹೆಚ್ಚು ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ 6,000ಕ್ಕೂ ಹೆಚ್ಚು ಜನರಿಗೆ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಈಗ 7 ಸಾವಿರಕ್ಕೂ ಅಧಿಕ ಜನರಿಗೆ ಕೋವಿಡ್ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಒಂದೇ ದಿನ 116 ಜನ ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 2,098ಕ್ಕೆ ತಲುಪಿದೆ. ರಾಜ್ಯದ 62 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ಪತ್ತೆಯಾಗಿದೆ.
ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲಿ 874 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿರ ಸಂಖ್ಯೆ 20 ಸಾವಿರದ ಗಡಿದಾಟಿದೆ. ತೆಲಂಗಾಣದಲ್ಲಿ ಶುಕ್ರವಾರ 169 ಮಂದಿಗೆ ಸೋಂಕು ಪತ್ತೆಯಾಗಿದ್ದು, ನಾಲ್ವರು ಮೃತಪಟ್ಟಿದ್ದರು. ಒಟ್ಟು 2,425 ಮಂದಿಗೆ ಕೊರೊನಾ ತಗುಲಿದೆ.








