ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ – ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು ಭಾರಿ ಮಳೆಯಾಗುತ್ತಿದೆ. ಮಕ್ಕಳ ಸಂಚಾರಕ್ಕೆ ತೊಂದರೆಯಾಗುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ಮತ್ತು ಎಲ್ಲ ಪಿಯುಸಿ, ಡಿಗ್ರಿ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಆದೇಶ ಹೊರಡಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ತಗ್ಗು ಪ್ರದೇಶಗಳು ತುಂಬುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ನಗರದ ಗುಜ್ಜರಕೆರೆ ಬಳಿಯ ಅರೆಕೆರೆ ಬೈಲ್ನಲ್ಲಿ ಚರಂಡಿ ನೀರು ರಸ್ತೆಗೆ ಬಂದು ಜನರು ಪರದಾಡುತ್ತಿದ್ದಾರೆ. ಹಲವೆಡೆ ಬಯಲು ಪ್ರದೇಶಗಳಿಗೆ ನೀರು ನುಗ್ಗಿದೆ.
ಇದೇ ರೀತಿ ಮಳೆ ಮುಂದುವರೆದರೆ ಶುಕ್ರವಾರದ ಪರಿಸ್ಥತಿ ನೋಡಿಕೊಂಡು ಶಾಲಾ ಕಾಲೇಜುಗಳಿಗೆ ರೆಜೆ ಘೋಷಣೆ ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.