ಮುಂದುವರೆದ ವರುಣನ ಅಬ್ಬರ, ಇಂದು ಮತ್ತು ನಾಳೆ ಭಾರಿ ಮಳೆ ಮುನ್ಸೂಚನೆ…
ದಕ್ಷಿಣ ಕನ್ನಡ ಉತ್ತರ ಕನ್ನಡ, ಮಲೆನಾಡು ಭಾಗ ಮತ್ತು ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದೆ. ಈ ಮಧ್ಯೆ ರಾಜ್ಯದ ವಿವಿಧೆಡೆ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಬೀದರ್, ಕಲಬುರಗಿ, ಬೆಳಗಾವಿ ಹಾಗೂ ಹಾಸನ ಜಿಲ್ಲೆಯಲ್ಲಿ ಇಂದು ಯೆಲ್ಲೊ ಆಲರ್ಟ್ ಘೋಷಿಸಲಾಗಿದೆ.
ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 KM ವರೆಗೆ ಬಿರುಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತವಾರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.








