ಕಂಗಾನ್, ಜೂನ್ 3 : ಇಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನೆ ಮೂವರು ಜೈಶ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರರನ್ನು ಎನ್ ಕೌಂಟರ್ ಮಾಡಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮ ಬಳಿ ಇರುವ ಕಂಗಾನ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮೂವರು ಜೈಶ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರರು ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.
ಹತರಾದ ಉಗ್ರಗಾಮಿಗಳಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಂಗಾನ್ ಪ್ರದೇಶದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಕೂಡ ಇಬ್ಬರು ಜೈಶ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರರು ಹತರಾಗಿದ್ದರು ಮತ್ತು ಭಾರಿ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು.








