ಹೊಸದಿಲ್ಲಿ, ಜೂನ್ 5 : ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ದೆಹಲಿಯ ಪಟೇಲ್ ನಗರದ ಆಮ್ ಆದ್ಮಿ ಪಕ್ಷದ ಶಾಸಕ ರಾಜ್ ಕುಮಾರ್ ಆನಂದ್ ಅವರು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದು ಪರೀಕ್ಷಾ ವರದಿ ಅವರಿಗೆ ಕೊರೊನಾ ಸೋಂಕು ತಗುಲಿರುವುದನ್ನು ದೃಢಪಡಿಸಿದೆ.
ಶಾಸಕ ರಾಜ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಅವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ತಿಳಿಸಿದ್ದು ನನಗೆ ಕೊರೊನಾ ಸೋಂಕಿನ ಸಣ್ಣ ಪ್ರಮಾಣದ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿದ್ದೆ. ಅದರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.
ಕೊರೊನಾ ಸೋಂಕಿನ ತೀವ್ರ ಮಟ್ಟದ ಲಕ್ಷಣಗಳು ಕಂಡು ಬಂದಿರದ ಹಿನ್ನಲೆಯಲ್ಲಿ ವೈದ್ಯರ ಸಲಹೆಯಂತೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ನಿನ್ನೆ ಒಂದೇ ದಿನದಲ್ಲಿ 1359 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಲ್ಲಿಯವರೆಗೆ ಒಟ್ಟು 25,004 ಮಂದಿಗೆ ಕೊರೊನಾ ತಗುಲಿದೆ. 22 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ದೆಹಲಿ ಸರ್ಕಾರ ತಿಳಿಸಿದೆ.