ಬೆಂಗಳೂರು : ಇತ್ತೀಚೆಗೆ ಕೋವಿಡ್ 19 ರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಿಂದಾಗಿ ಪರಿಸರ ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿರುವುದು ಸಮಾಧಾನಕರ ವಿಷಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇಂದು ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಮ್ಮಿಕೊಂಡಿರುವ ಡಿಜಿಟಲ್ ಅಭಿಯಾನ 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವ ವಿಚಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ ಈ ಬಾರಿ ಪರಿಸರ ದಿನಾಚರಣೆಯ ವಿಷಯ “ಜೀವ ವೈವಿಧ್ಯ”. ಜೀವ ವೈವಿಧ್ಯ ಇದ್ದಾಗ ಮಾತ್ರ ಪರಿಸರ ಸಮತೋಲನ ಕಾಪಾಡಲು ಸಾಧ್ಯ ಎಂದರು. ಸಮಾರಂಭದಲ್ಲಿ ಪರಿಸರ ಗೀತೆ, ಯೂಟ್ಯೂಬ್ ಚಾನಲ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳಕೆದಾರ ಸ್ನೇಹಿ ವೆಬ್ ಸೈಟಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ ಟಿ ರವಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ವಿಜಯ್ ಕುಮಾರ್ ಗೋಗಿ, ಸದಸ್ಯ ಕಾರ್ಯದರ್ಶಿ ಶ್ರೀನಿವಾಸುಲು ಉಪಸ್ಥಿತರಿದ್ದರು.








