ಬೆಂಗಳೂರು : ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇದೇ 14ರಂದು ಪಕ್ಷದ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡುವುದು ಬಹುತೇಕ ಖಚಿತವಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಪಕ್ಷದ ಕಚೇರಿಯಲ್ಲಿ ಸರಳ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅನುಮತಿಗಾಗಿ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಆದರೆ, ಅನುಮತಿ ನೀಡುವ ಬಗ್ಗೆ ಜೂನ್ 8ರ ಬಳಿಕ ಸರ್ಕಾರ ಪರಿಶೀಲನೆ ನಡೆಸಲಿದೆ.
ಇನ್ನು ಡಿ.ಕೆ ಶಿವಕುಮಾರ್, ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಪಕ್ಷ ಧ್ವಜ ಪಡೆದುಕೊಂಡು, ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಅಧ್ಯಕ್ಷ ಸ್ಥಾನವನ್ನು ಅಧಿಕೃತವಾಗಿ ಅಲಂಕರಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಅಂದು ಈ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದೂ ಪಕ್ಷದ ಮೂಲಗಳು ಹೇಳಿವೆ.
ಈ ಹಿಂದೆ ಮೂರು ಬಾರಿ ಡಿ.ಕೆ. ಶಿವಕುಮಾರ್ ಪದಗ್ರಹಣಕ್ಕೆ ಮುಹೂರ್ತ ನಿಗದಿಪಡಿಸಲಾಗಿತ್ತು. ಆದರೆ ಪದಗ್ರಹಣ ಕಾರ್ಯಕ್ರಮಕ್ಕೆ ಕೊರೊನಾ ಲಾಕ್ಡೌನ್ ವಿಘ್ನವಾಗಿ ಕಾಡಿದೆ. ಮೊದಲು ಏಪ್ರಿಲ್ ಎರಡನೇ ವಾರದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿತ್ತು. ಬಳಿಕ ಮೇ 31ರಂದು ಅಧಿಕಾರ ಸ್ವೀಕಾರ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ನಡೆದಿತ್ತು. ಆದರೆ, ಲಾಕ್ಡೌನ್ ವಿಸ್ತರಿಸಿದ್ದರಿಂದ ಆ ದಿನವನ್ನು ಜೂನ್ 7ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ಲಾಕ್ಡೌನ್ ಅವಧಿಯಲ್ಲಿ ಯಾವುದೇ ರಾಜಕೀಯ ಕಾರ್ಯಕ್ರಮ ನಡೆಸಲು ಅವಕಾಶ ಇಲ್ಲದೇ ಇರುವುದರಿಂದ ಮತ್ತೆ ಪದಗ್ರಹಣ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಈ ಮಧ್ಯೆ, ತಮ್ಮ ಪದಗ್ರಹಣ ವಿಚಾರದಲ್ಲೂ ಬಿಜೆಪಿ ರಾಜಕೀಯ ನಡೆಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದರು.








