ಬೆಂಗಳೂರು : ದಿನದಿಂದ ದಿನಕ್ಕೆ ಕೋವಿಡ್-೧೯ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಪರೀಕ್ಷೆ ಏಕೆ ರದ್ದು ಮಾಡಬಾರದು ಎಂಬ ಪ್ರಶ್ನೆಯನ್ನು ಪೋಷಕರು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.
ಮಹಾರಾಷ್ಟç ಹಾಗೂ ತಮಿಳುನಾಡಿನಿಂದ ಬರುತ್ತಿರುವವರಿಂದಲೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದ್ದು, ರಾಜ್ಯದ ಜನತೆಯನ್ನು ಆತಂಕಕ್ಕೆ ದೂಡಿದೆ.
ಹೆಚ್ಚೂ ಕಡಿಮೆ ಲಾಕ್‌ಡೌನ್ ತೆರವಾಗಿದೆ. ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಇದರ ಜೊತೆಯಲ್ಲೇ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡುವಂತೆ ಪೋಷಕರು ರಾಜ್ಯಾದ್ಯಂತ ಸೋಷಿಯಲ್ ಮೀಡಿಯಾ ಮೂಲಕ ಅಭಿಯಾನ ನಡೆಸಿದ್ದರು. ಜತೆಗೆ ಈ ವರ್ಷ ಶಾಲಾ-ಕಾಲೇಜುಗಳನ್ನು ತೆರಯಬೇಡಿ. ಖಾಸಗಿ ಶಾಲೆ ಹಾಗೂ ಕಾಲೇಜುಗಳ ಆಡಳಿತ ಮಂಡಳಿಗಳ ಲಾಬಿಗೆ ಮಣಿಯಬೇಡಿ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತಲೇ ಬಂದಿದ್ದರು. ಆದರೆ ರಾಜ್ಯ ಶಿಕ್ಷಣ ಇಲಾಖೆ ಮಾತ್ರ ಜೂ.೨೫ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾಡಿಯೇ ತೀರುತ್ತೇವೆ ಎಂದು ಹಠಕ್ಕೆ ಬಿದ್ದಂತೆ ಕಾಣುತ್ತಿದೆ.
ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಷ್ಟ. ಬಹುಬೇಗ ಮಕ್ಕಳಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಡ ಎಂದು ಪೋಷಕರು ಆಗ್ರಹಿಸುತ್ತಿದ್ದಾರೆ. ಆದರೆ, ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ಭರದ ಸಿದ್ದತೆ ಮುಂದುವರೆಸಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾಡಿಯೇ ತೀರುತ್ತೇವೆ
ನೆರೆಯ ತೆಲಂಗಾಣ, ತಮಿಳುನಾಡು ರಾಜ್ಯಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಇಂದು ರದ್ದು ಮಾಡಿ ಆದೇಶ ಹೊರಡಿಸಿದ್ದರೂ ಮಾತ್ರ, ಕರ್ನಾಟಕ ಸರ್ಕಾರ ಮಾತ್ರ ಪರೀಕ್ಷೆ ಮಾಡಿಯೇ ಸಿದ್ದ ಎಂದು ಹೇಳಿದೆ.
ಜೂ.೨೫ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಪರೀಕ್ಷೆಗಳನ್ನು ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸುರೇಶ್‌ಕುಮಾರ್, ನಿಗದಿಯಂತೆ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳುವುದು ಬೇಡ. ಪರೀಕ್ಷೆ ನಡೆಸಲು ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ. ಹೀಗಾಗಿ ಭಯಪಡದೇ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.
ತಮಿಳುನಾಡಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡಿದ್ದರೂ ನಾವು ಮಾಡಲ್ಲ. ನಾವು ತಮಿಳುನಾಡು ಮಾದರಿಯನ್ನು ಅನುಸರಿಸಲ್ಲ. ನಾವು ಮಾಡುತ್ತಿರುವ ಕ್ರಮಗಳನ್ನು ನೋಡಿ ತಮಿಳುನಾಡು ಪರೀಕ್ಷೆ ನಡೆಸಲಿ. ಒಂದು ವೇಳೆ ಜೂನ್‌ನಲ್ಲಿ ಪರೀಕ್ಷೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅಗದೇ ಇದ್ದರೆ, ಜುಲೈನಲ್ಲಿ ಮತ್ತೊಂದು ಅವಕಾಶ ನೀಡುತ್ತೇವೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಪರೀಕ್ಷೆ ವಂಚಿತರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುತ್ತೇವೆ ಎಂದು ಸುರೇಶ್‌ಕುಮಾರ್ ತಿಳಿಸಿದ್ದಾರೆ.
ತಮಿಳುನಾಡಲ್ಲೂ ಎಸ್‌ಎಸ್‌ಎಸ್‌ಸಿ ಪರೀಕ್ಷೆ ರದ್ದು ಕರ್ನಾಟಕದಲ್ಲೂ ಕ್ಯಾನ್ಸಲ್ ಆಗುತ್ತಾ..?
ಬೆಂಗಳೂರು: ದೇಶಾದ್ಯಂತ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ ೨ ಲಕ್ಷದ ೬೬ ಸಾವಿರದ ಗಡಿ ದಾಟಿದ್ದು, ಭಾರಿ ಅತಂಕಕ್ಕೆ ಕಾರಣವಾಗಿದೆ. ಇನ್ನೊಂದೆಡೆ ದೇಶದಲ್ಲಿ ಅತಿಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಮಹಾರಾಷ್ಟç ನಂತರ ಎರಡನೇ ಸ್ಥಾನದಲ್ಲಿರುವ ತಮಿಳುನಾಡು, ಪ್ರಸಕ್ತ ವರ್ಷದ ಎಸ್‌ಎಸ್‌ಎಸ್‌ಸಿ ಪರೀಕ್ಷೆ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿ ಮಹತ್ವದ ಆದೇಶ ಮಾಡಿದೆ.
ನೆರೆಯ ತೆಲಂಗಾಣ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡಿರುವ ಬೆನ್ನಲ್ಲೇ ತಮಿಳುನಾಡು ಕೂಡ ಪರೀಕ್ಷೆ ರದ್ದು ಮಾಡುವ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಮನೆ ಮಾಡಿದ್ದ ಆತಂಕವನ್ನು ದೂರ ಮಾಡಿದೆ.
sಸದ್ಯ ತಮಿಳುನಾಡಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೩೩ ಸಾವಿರದ ೨೨೯ಕ್ಕೆ ತಲುಪಿದೆ. ಕಳೆದ ೨೪ ಗಂಟೆಗಳಲ್ಲಿ ತಮಿಳುನಾಡಿನಲ್ಲಿ ೧೫೬೨ ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.








