ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕೊರೊನಾ ಸೋಂಕಿಲ್ಲ

ಹೊಸದಿಲ್ಲಿ, ಜೂನ್ 10: ಕಳೆದ ಕೆಲವು ದಿನಗಳಿಂದ ಶೀತ ಜ್ವರ ಗಂಟಲು ನೋವಿನಿಂದ ಬಳಲುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕೊರೊನಾ ಸೋಂಕಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಜೂನ್ 7 ರಂದು ಅರವಿಂದ್ ಕೇಜ್ರಿವಾಲ್ ಗೆ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರು ವೈದ್ಯರ ಸಲಹೆ ಮೇರೆಗೆ ಐಸೊಲೇಷನ್ ಗೆ ಒಳಗಾಗಿದ್ದರು ಮತ್ತು ಇಂದು ಕೊರೊನಾ ಪರೀಕ್ಷೆಗೆ ಒಳಗಾದರು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೊನಾ ಸೋಂಕು ತಗುಲಿಲ್ಲ ಎನ್ನುವುದು ಗೊತ್ತಾಗಿದೆ.
ಅರವಿಂದ್ ಕೇಜ್ರಿವಾಲ್ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೊದಲೇ ಕೆಮ್ಮು, ಗಂಟಲು ನೋವು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ನಂತರ ಪ್ರಕೃತಿ ಚಿಕಿತ್ಸಾ ವಿಧಾನದ ಮೂಲಕ ಅದರಿಂದ ಗುಣಮುಖರಾಗಿದ್ದರು.
ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೊನಾ ಸೋಂಕಿಲ್ಲದಿದ್ದರೂ ಅನಾರೋಗ್ಯದ ಹಿನ್ನಲೆಯಲ್ಲಿ ಅವರು ಸಂಪೂರ್ಣವಾಗಿ ಗುಣಮುಖರಾಗುವವರೆಗೆ ಯಾವುದೇ ಕಾರ್ಯಕ್ರಮ, ಸಭೆಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆ ಇದೆ. ಅಲ್ಲದೇ ಕೇಜ್ರಿವಾಲ್ ಮಧುಮೇಹ ಕಾಯಿಲೆಯಿಂದಲೂ ಬಳಲುತ್ತಿದ್ದು, ಹೆಚ್ಚಿನ ಮುಂಜಾಗ್ರತೆ ವಹಿಸಬೇಕಾಗಿದೆ.

ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಪ್ರಕರಣಗಳು ಬಹಳಷ್ಟು ಪತ್ತೆಯಾಗಿದ್ದು, ಮುಂದಿನ 10 ದಿನಗಳಲ್ಲಿ 50 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.








