HDK – ತುಮಕೂರು ಘಟನೆಗೆ ನೈತಿಕ ಹೊಣೆ ಹೊತ್ತು ಸುಧಾಕರ್ ರಾಜೀನಾಮೆ ನೀಡಲೇಬೇಕು
ಬೆಂಗಳೂರು : ಸಚಿವರೇ, ತುಮಕೂರು ಘಟನೆಗೆ ನೈತಿಕ ಹೊಣೆ ಹೊತ್ತು ನೀವು ರಾಜೀನಾಮೆ ನೀಡಲೇಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಜೀವ ಕಳೆದುಕೊಂಡಿದ್ದಾರೆ. ಈ ಸಂಬಂಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಆರೋಗ್ಯ ಸಚಿವ ಡಾ.ಸುಧಾಕರ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ..
ನನ್ನ ಸರಕಾರವಿದ್ದಾಗ ಚಾಮರಾಜನಗರದ ಸುಳವಾಡಿಯ ದೇಗುಲದಲ್ಲಿ ನಡೆದ ವಿಷಪ್ರಸಾದ ಪ್ರಕರಣಕ್ಕೂ ಇದಕ್ಕೂ ಸಂಬಂಧವೇನು? ಆ ಘಟನೆ ನಡೆದಾಗ ನಾನು ಚೆನ್ನೈನಲ್ಲಿ ಅಧಿಕೃತ ಪ್ರವಾಸದಲ್ಲಿದ್ದೆ. ವಿಷಯ ಗೊತ್ತಾದ ಕೂಡಲೇ ಹಿಂದಿರುಗಿ ಸ್ಥಳಕ್ಕೆ ಭೇಟಿ ನೀಡಿದ್ದೆ. ಅದಕ್ಕೂ ಇದಕ್ಕೂ ಸಂಬಂಧವೇನು? ಅಲ್ಲಿ ನಡೆದಿದ್ದು ಷಡ್ಯಂತ್ರ,ಇಲ್ಲಿ ನಡೆದದ್ದು ಕ್ರೌರ್ಯ.
ಅದೇ ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಿಂದ 36 ಜನರ ಸಾವಿಗೆ ಕಾರಣರಾಗಿದ್ದು ಯಾರು? ನಿಮ್ಮ ವೈಫಲ್ಯವಲ್ಲವೇ? ರಾಜ್ಯದ ಉದ್ದಗಲಕ್ಕೂ ನಡೆದ ಸಾವುಗಳ ರಣಕೇಕೆ ನಿಮ್ಮ ಕಿವಿಗೆ ಇಂಪಾಗಿತ್ತಾ? ಕೋವಿಡ್ ಹೆಸರಿನಲ್ಲಿ ನಡೆದ ಕೊಳ್ಳೆ ಬಗ್ಗೆ ನನಗಿಂತ ನಿಮ್ಮ ಪಕ್ಷದವರಿಗೇ ಚೆನ್ನಾಗಿ ಗೊತ್ತು.
ಕಾಸಿಗಾಗಿ ಹುದ್ದೆ; ಇದು ನಿಮ್ಮ ಸುಲಿಗೆ ನೀತಿ. ವೈದ್ಯರು, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಬಿಕರಿಗಿಟ್ಟಿದ್ದೀರಿ. ಅವರ ಒಂದು ವರ್ಷದ ವೇತನ ನೀವು ನಿಗದಿ ಮಾಡಿರುವ ದರ. ಬೆಕ್ಕು ಕಣ್ಮುಚ್ಚಿ ಹಾಲು ಕುಡಿಯುತ್ತಿದೆ ಎಂದರೆ ಲೋಕಕ್ಕೆ ಕಾಣುವುದಿಲ್ಲವೇ? ಕಳ್ಳಬೆಕ್ಕಿನ ಆಟ ಕಾಲದುದ್ದಕ್ಕೂ ನಡೆಯುವುದಿಲ್ಲ, ನೆನಪಿರಲಿ ಸಚಿವರೇ!
ನಿಮ್ಮ ಪರ್ಸಂಟೇಜ್ ವ್ಯವಹಾರದ ಬಗ್ಗೆ ಮಾತನಾಡಿದ ಗುತ್ತಿಗೆದಾರರಾದ ಕೆಂಪಣ್ಣ ಅವರು ಚಿಕ್ಕಬಳ್ಳಾಪುರದ ಕಾರ್ಯಕ್ರಮ ಒಂದಕ್ಕೆ ಬರಬೇಕಿತ್ತು. ಅವರನ್ನು ಬರದಂತೆ ತಡೆಯಲು ಏನೆಲ್ಲಾ ಹೈಡ್ರಾಮಾ ನಡೆಸಿದರಿ, ಯಾರ ಕಾಲು ಹಿಡಿದಿರಿ ಎನ್ನುವ ಮಾಹಿತಿ ನನಗೂ ಇದೆ. ʼಗಾಜಿನ ಮನೆಯಲ್ಲಿ ಕೂತು ಗೋಲಿಯಾಟ ಆಡುವುದು ಕ್ಷೇಮವಲ್ಲʼ ಸಚಿವರೇ.
ಸಚಿವರೇ, ತುಮಕೂರು ಘಟನೆಗೆ ನೈತಿಕ ಹೊಣೆ ಹೊತ್ತು ನೀವು ರಾಜೀನಾಮೆ ನೀಡಲೇಬೇಕು. ಆ ನೈತಿಕತೆ ನಿಮಗೆ ಇಲ್ಲದಿದ್ದರೆ, ಅದನ್ನು ಕೊನೆಪಕ್ಷ ನಿಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಾದರೂ ಪ್ರದರ್ಶಿಸಬೇಕು. ನಿಮ್ಮನ್ನು ಸಂಪುಟದಿಂದ ಕಿತ್ತೊಗೆಯಲೇಬೇಕು. ನಿಮ್ಮ ಪಕ್ಷಕ್ಕೂ ಅಂಥ ನೈತಿಕತೆ ಬಿಜೆಪಿ ಸರಕಾರಕ್ಕೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.