ಬಿಜೆಪಿಯ ದೆಹಲಿ ಘಟಕದ ಮುಖಂಡ ಸಂಜಯ್ ಶರ್ಮಾ ಕೊರೊನಾಗೆ ಬಲಿ
ದೆಹಲಿ, ಜೂನ್ 12: ಬಿಜೆಪಿ ನಾಯಕ ಸಂಜಯ್ ಶರ್ಮಾ ಅವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಬಿಜೆಪಿಯ ದೆಹಲಿ ಘಟಕದ ಮುಖಂಡರಾಗಿರುವ ಇವರು, ಈ ಹಿಂದೆ ಪಾರ್ಟಿ ಕಮಿಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಕೆಲಸದಲ್ಲಿ ಇವರು ತೊಡಗಿಸಿಕೊಂಡಿದ್ದರು. ಕೊರೋನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಬಿಜೆಪಿಯ ದೆಹಲಿ ಘಟಕದ ಪ್ರಧಾನ ಕಾರ್ಯದರ್ಶಿ ರಾಜೇಶ್ ಭಾಟಿಯಾ ಅವರು ಸಂಜಯ್ ಶರ್ಮಾ ಅವರು ಕೊರೊನಾದಿಂದ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಕೊರೊನಾ ಪ್ರಕರಣಗಳ ಜೊತೆಗೆ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಏರಿಕೆ ಕಂಡಿದೆ.








