ಮತ್ತೊಮ್ಮೆ ಮುಚ್ಚಿದ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನ
ತಿರುವನಂತಪುರ, ಜೂನ್ 14: ತ್ರಿಶ್ಶೂರ್ ಜಿಲ್ಲೆಯ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನವನ್ನು ಮತ್ತೆ ಮುಚ್ಚಲು ಕೇರಳ ಸರ್ಕಾರ ನಿರ್ಧರಿಸಿದೆ.
ತ್ರಿಶ್ಶೂರ್ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ಮತ್ತು ಶುಕ್ರವಾರ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟ ಹಿನ್ನಲೆಯಲ್ಲಿ ಕೇರಳ ಸರ್ಕಾರ ದೇವಸ್ಥಾನವನ್ನು ಮತ್ತೆ ಮುಚ್ಚುವ ನಿರ್ಧಾರ ಕೈಗೊಂಡಿದೆ.
ಶುಕ್ರವಾರ ಹೊಸದಾಗಿ 78 ಕೊರೊನಾ ಪ್ರಕರಣಗಳು ತ್ರಿಶ್ಶೂರ್ ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 165 ತಲುಪಿದೆ. ಈ ಹಿನ್ನೆಲೆಯಲ್ಲಿ ಶನಿವಾರದಿಂದಲೇ ಅನ್ವಯವಾಗುವಂತೆ ಗುರುವಾಯೂರಿನ ದೇವಸ್ಥಾನವನ್ನು ಬಂದ್ ಮಾಡಲಾಗಿದೆ ಎಂದು ದೇವಸ್ವಂ ಸಚಿವ ಕಡಕಂಪಳ್ಳಿ ಸುರೇಂದ್ರನ್ ತಿಳಿಸಿದ್ದಾರೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ಹೇರಲಾಗಿದ್ದ ನಿರ್ಬಂಧವನ್ನು ಕಳೆದ ಭಾನುವಾರದಂದು ಸರ್ಕಾರ ತೆರವುಗೊಳಿಸಿ ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡಿತ್ತು. ಇದೀಗ ಕೊರೊನಾ ಸೋಂಕು ಹರಡುವ ಭೀತಿಯ ಹಿನ್ನಲೆಯಲ್ಲಿ ಮತ್ತೆ ಗುರುವಾಯೂರಿನ ದೇವಸ್ಥಾನವನ್ನು ಬಂದ್ ಮಾಡಲಾಗಿದೆ.